ನವದೆಹಲಿ:ಕೋವಿಡ್ 19 ಸೋಂಕು ಹರಡುವ ಆತಂಕದ ನಡುವೆಯೇ ಇಂದಿನಿಂದ ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭವಾಗಿದೆ. ಏತನ್ಮಧ್ಯೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ
ಪರೀಕ್ಷೆಯನ್ನು ರದ್ದುಪಡಿಸಲು ಯುಜಿಸಿ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿಯೊಂದು ತಿಳಿಸಿದೆ.
ದೇಶಾದ್ಯಂತ ಕೋವಿಡ್ 19 ಮಹಾಮಾರಿ ಅಟ್ಟಹಾಸ ಮುಂದುವರಿದಿರುವ ಹಿನ್ನೆಲೆಯಲ್ಲಿ ಯುಜಿಸಿ ಮುಖ್ಯವಾಗಿ ವಿವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಸೆಮಿಸ್ಟರ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಾಯಿಸಿಕೊಂಡಿರುವುದಾಗಿ ಹೇಳಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಸಮಂಜಸವಲ್ಲ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಸುರಕ್ಷತೆಯ ದೃಷ್ಟಿಯಲ್ಲಿ ಆತಂಕ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಪರೀಕ್ಷೆ ರದ್ದುಪಡಿಸುವ ಬಗ್ಗೆ ಯುಜಿಸಿ ಸಮಿತಿ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಪಡಿಸಿ, ಹಿಂದಿನ ಸೆಮಿಸ್ಟರ್ ನಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಹರ್ಯಾಣ ಯೂನಿರ್ವಸಿಟಿ ಉಪ ಕುಲಪತಿ ಆರ್ ಸಿ ಕುಹಾದ್ ನೇತೃತ್ವದ ಯುಜಿಸಿ ಸಮಿತಿ ಶಿಫಾರಸು ಮಾಡಿರುವುದಾಗಿ ತಿಳಿಸಿದೆ.
ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಯೂನಿರ್ವಸಿಟಿ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಗೋಪಾಯ ಸೂಚಿಸುವಂತೆ ಆರ್ ಸಿ ಕುಹಾದ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ಅಲ್ಲದೇ ಏಪ್ರಿಲ್ ನಲ್ಲಿ ಯುಜಿಸಿ ಮಾರ್ಗಸೂಚಿ ಪ್ರಕಾರ, ಕಾಲೇಜು ಮತ್ತು ಯೂನಿರ್ವಸಿಟಿಯ ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು 2020ರ ಜುಲೈನಲ್ಲಿ ನಡೆಸಬಹುದು ಎಂದು ತಿಳಿಸಿತ್ತು.
ಆದರೆ ಇದೀಗ ಕೋವಿಡ್ ಪರಿಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ನಿಟ್ಟನಿಲ್ಲಿ ಅಂತಿಮ ಸೆಮಿಸ್ಟರ್ ಪರೀಕ್ಷೆ ಈ ಬಾರಿ ನಡೆಸಲು ಅಸಾಧ್ಯವಾಗಲಿದ್ದು, ವಿದ್ಯಾರ್ಥಿಗಳ ಹಿಂದಿನ ಸೆಮಿಸ್ಟರ್ ಮತ್ತು ಆಂತರಿಕ ಮೌಲ್ಯಮಾಪನದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸುವಂತೆ ಶಿಫಾರಸು ಮಾಡಿದೆ. ಇನ್ನು, ಡಿಗ್ರಿ. ಸ್ನಾತಕೋತ್ತರ ಪದವಿ ಅಂತಿಮ ಸೆಮಿಷ್ಟರ್ ಪರೀಕ್ಷೆಗಳ ಬಗ್ಗೆ ಯುಜಿಸಿ ಅಧಿಕೃತವಾಗಿ ನಿರ್ಧಾರ ಪ್ರಕಟಿಸುವುದು ಬಾಕಿ ಉಳಿದಿದೆ ಎಂದು ವರದಿ ತಿಳಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ಮಹಾರಾಷ್ಟ್ರ, ಒಡಿಶಾ, ಮಧ್ಯಪ್ರದೇಶ ಮತ್ತು ಹರ್ಯಾಣ ರಾಜ್ಯಗಳಲ್ಲಿ ಎಲ್ಲಾ ವಿವಿಯ ಹಾಗೂ ಕಾಲೇಜುಗಳ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಕೋವಿಡ್ ಭಯದಿಂದ ಪರೀಕ್ಷೆ ರದ್ದುಗೊಳಿಸುವಂತೆ ವಿದ್ಯಾರ್ಥಿಗಳ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.