ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತಾರಕಕ್ಕೇರಿದ್ದು, ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಮಾರ್ಚ್ 07) ಮಧ್ಯಾಹ್ನ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂವಹನ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಡಿಕೆಶಿ ಒಟ್ಟಾರೆ ನಡೆ ಬಗ್ಗೆ ಸಿದ್ದು ಅಸಮಾಧಾನ? ಅಧಿವೇಶನ ಬಳಿಕ ವರಿಷ್ಠರ ಭೇಟಿ
ಮತ್ತೊಂದೆಡೆ ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಉಕ್ರೇನ್ ಅಧ್ಯಕ್ಷ ವೋಲೋದಿಮಿರ್ ಝೆಲೆನ್ ಸ್ಕಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ 16,000ಕ್ಕೂ ಅಧಿಕ ಭಾರತೀಯರನ್ನು ರಕ್ಷಿಸುವ ಆಪರೇಷನ್ ಗಂಗಾ ಬೃಹತ್ ಏರ್ ಲಿಫ್ಟ್ ಕಾರ್ಯಾಚರಣೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ರಷ್ಯಾದ ಆಕ್ರಮಣ ಖಂಡಿಸಿ ವಿಶ್ವಸಂಸ್ಥೆಯಲ್ಲಿ ಮತ ಚಲಾಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಗೂ ಉಳಿದ ಭಾರತೀಯರ ರಕ್ಷಣಾ ಕಾರ್ಯಾಚರಣೆ ಕುರಿತು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಜೊತೆ ಮಾತುಕತೆ ನಡೆಯಲಿದೆ ಎಂದು ವರದಿ ತಿಳಿಸಿದೆ.
ಭಾರತದ ಜೊತೆ ಎಲ್ಲಾ ದೇಶಗಳು ವಿಶೇಷವಾದ ಬಾಂಧವ್ಯ ಹೊಂದಿದ್ದು, ಈ ನಿಟ್ಟಿನಲ್ಲಿ ಭಾರತ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತುಕತೆ ನಡೆಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಉಕ್ರೇನ್ ವಿದೇಶಾಂಗ ಸಚಿವ ಡೆಮೈಟ್ರೋ ಕುಲೆಬಾ ಒತ್ತಾಯಿಸಿದ್ದರು. ಅಲ್ಲದೇ ಪ್ರಧಾನಿ ಮೋದಿ ಅವರು ಪುಟಿನ್ ಜತೆ ಚರ್ಚಿಸಿ, ಈ ಯುದ್ಧ ಎಲ್ಲಾ ಹಿತಾಸಕ್ತಿಯ ವಿರುದ್ಧವಾದದ್ದು ಎಂಬುದನ್ನು ವಿವರಿಸಬೇಕು ಎಂಬುದಾಗಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬಾರಿ ರಷ್ಯಾ ಅಧ್ಯಕ್ಷ ಪುಟಿನ್ ಜತೆ ಮಾತುಕತೆ ನಡೆಸಿದ್ದರು. ರಾಜತಾಂತ್ರಿಕ ಮಾತುಕತೆ ಮೂಲಕ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳುವಂತೆ ಮೊದಲ ಸುತ್ತಿನ ಮಾತುಕತೆಯಲ್ಲಿ ಪ್ರಧಾನಿ ಮೋದಿ ಅವರು ಪುಟಿನ್ ಅವರಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.