ಹೊಸದಿಲ್ಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆಯುತ್ತಿದೆ. ಕೋವಿಡ್ ಕಳವಳದ ನಡುವೆಯೂ ಸೂಕ್ತ ಮುಂಜಾಗೃತಾ ಕ್ರಮಗಳೊಂದಿಗೆ ಆಗಸ್ಟ್ 5ರಂದು ಭೂಮಿ ಪೂಜೆ ನಡೆಯಲಿದೆ. ಆದರೆ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಕೋವಿಡ್-19 ಸೋಂಕು ಭೀತಿಯ ಕಾರಣದಿಂದ ಉಮಾ ಭಾರತಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿಶ್ಚಯಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ಹಿರಿಯ ನಾಯಕಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮತ್ತು ಇತರ ಗಣ್ಯರು ಬರುವ ಕಾರಣ ಅವರುಗಳ ಆರೋಗ್ಯ ದೃಷ್ಟಿಯಿಂದ ತಾನೂ ಕಾರ್ಯಕ್ರಮದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಆಹ್ವಾನಿಸಿ ಬಂದ ಪತ್ರವನ್ನು ನಿರಾಕರಿಸಿ, ಅಧಿಕಾರಿಗಳಿಗೆ ಮತ್ತು ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಈ ವಿಷಯವನ್ನು ತಿಳಿಸಿದ್ದಾರೆ.
ಆದರೆ ತಾನು ಅಯೋಧ್ಯೆಗೆ ಪ್ರಯಾಣ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಪೂಜೆಯ ಸಮಯದಲ್ಲಿ ಸರಯೂ ನದಿಯ ಮತ್ತೊಂದು ದಂಡೆಯಲ್ಲಿ ಇರುತ್ತೇನೆ ಎಂದು ಉಮಾ ಭಾರತಿ ತಿಳಿಸಿದ್ದಾರೆ.