ಬೆಂಗಳೂರು: ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಅಸ ಮಾಧಾನಗೊಂಡಿರುವ ಹುಕ್ಕೇರಿ ಬಿಜೆಪಿ ಶಾಸಕ ಉಮೇಶ್ ಕತ್ತಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡುತ್ತಾರೆಂಬ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸ ವಾಯಿತು.
ಗುರುವಾರ ಬೆಳಿಗ್ಗೆ ದೂರವಾಣಿ ಮೂಲಕ ಮಾತನಾಡಿ ಭೇಟಿ ಮಾಡುವುದಾಗಿ ಹೇಳಿದ್ದರು ಎಂದು ತಿಳಿದು ಬಂದಿತ್ತು. ಆದರೆ, ಗೌಪ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸುವ ಉದ್ದೇಶ ಹೊಂದಿದ್ದ ಉಮೇಶ್ ಕತ್ತಿ, ಸಿದ್ದರಾಮಯ್ಯ ಭೇಟಿಯ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದರಿಂದ ತಮ್ಮ ಭೇಟಿಯನ್ನು ರದ್ದುಗೊಳಿಸಿದರು ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ನಂಬಿಕೊಂಡಿದ್ದ ಉಮೇಶ್ ಕತ್ತಿಗೆ ಅವಕಾಶ ದೊರೆಯದಿರುವುದರಿಂದ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಅಲ್ಲದೇ ಜಿಲ್ಲೆಯಲ್ಲಿ ತಮ್ಮ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ, ಅವರಿಗೆ ಮಂತ್ರಿ ಸ್ಥಾನ ನೀಡಿರುವುದು ಆಕ್ರೋ ಶಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅದೇ ಕಾರಣಕ್ಕೆ ಮುಂದಿನ ರಾಜಕೀಯ ನಡೆ ಅವರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ತಮ್ಮ ಮುಂದಿನ ರಾಜಕೀಯ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದ್ದರು ಎನ್ನಲಾಗುತ್ತಿದೆ.
ಆದರೆ, ಬಹಿರಂಗವಾಗಿ ಭೇಟಿ ಮಾಡಿ ಮಾತುಕತೆ ನಡೆಸುವುದರಿಂದ ತಮ್ಮದೇ ಸಮುದಾಯದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವುದರಿಂದ ಸಮಾಜದಲ್ಲಿ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ ಎಂಬ ಕಾರಣಕ್ಕೆ ಉಮೇಶ್ ಕತ್ತಿ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಲು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.