ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಘಟನೆ ಮಂಗಳವಾರ (ಅ.22) ನಡೆದಿದೆ.
ಮೂವರು ಕಾರ್ಮಿಕರ ಶವ ಪತ್ತೆಯಾಗಿದ್ದು, ಕುಸಿದ ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ರಕ್ತ ಸಿಕ್ತ ಸ್ಥಿತಿಯಲ್ಲಿ ಹೊರಗೆ ಬಂದಿದ್ದಾನೆ. ಕಾರ್ಮಿಕನ ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿತ್ತು. ರಕ್ತದ ಮಡುವಿನಲ್ಲೇ ಅಳುತ್ತ ನಮ್ಮವರು ಒಳಗೆ ಸಿಲುಕಿದ್ದಾರೆಂದು ಎಂದು ಮಾಹಿತಿ ನೀಡಿದ್ದಾನೆ.
ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.