ಬೆಂಗಳೂರು: ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು, ಯುವಜನರು ಮತ್ತು ಗ್ರಾಮೀಣ ಭಾರತದ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರದ ಬಜೆಟ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕೆ ಈ ಟೀಕೆಯನ್ನು ನಾನು ಮಾಡು ತ್ತಿಲ್ಲ.ಯಾರಾದರೂ ಆಯವ್ಯಯ ಪತ್ರವನ್ನು ಓದಿದರೆ ಮೇಲ್ನೋಟಕ್ಕೇ ರೈತರು, ಯುವಜನರು ಮತ್ತು ಗ್ರಾಮೀಣ ಕ್ಷೇತ್ರಗಳನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ.
ಸರ್ಕಾರದ ಸಾಧನೆಗಳನ್ನು ಲೆಕ್ಕಕ್ಕೆ ಇಟ್ಟುಕೊಳ್ಳದೆ ಪ್ರಚಾರ ವೈಭವಕ್ಕೆ ಮರುಳಾಗಿ ಮತಚಲಾಯಿಸಿದರೆ ಏನಾಗುತ್ತದೆ ಎನ್ನುವುದಕ್ಕೆ ಕೇಂದ್ರ ಸರ್ಕಾರದ 2019-20 ಸಾಲಿನ ಬಜೆಟ್ ಜ್ವಲಂತ ಸಾಕ್ಷಿ ಎಂದರು.
ದೇಶದ ರೈತರು ಸರಿಯಾದ ಮಳೆ ಇಲ್ಲದೆ, ಬೆಳೆದ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ದೇಶದ ಯುವಜನತೆ ನಿರುದ್ಯೋಗದಿಂದಾಗಿ ದಿಕ್ಕೆಟ್ಟು ಕೂತಿದ್ದಾರೆ. ಈ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ನರೇಂದ್ರ ಮೋದಿ ತಮ್ಮದು ರೈತ ಮತ್ತು ಯುವಜನ ವಿರೋಧಿ ಪಕ್ಷ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ವಂಚಕ ಉದ್ಯಮಿಗಳನ್ನು ಪೋಷಿಸುತ್ತಾ ರೈತ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವ ಮೋದಿ ಸರ್ಕಾರ ತನ್ನ ರೈತ ವಿರೋಧಿ ನೀತಿಯನ್ನು ಮುಂದುವರಿಸಿಕೊಂಡು ಹೋಗುವ ಸೂಚನೆಯನ್ನು ಬಜೆಟ್‌ನಲ್ಲಿ ನೀಡಿದೆ ಎಂದು ಆರೋಪಿಸಿದರು.
ರೈತರ ಸಾಲ ಮನ್ನಾ ಮಾಡಬೇಕೆಂದು ಇಡೀ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರ ಕ್ಷೇತ್ರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆಂದು ಐದು ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರ್ಕಾರ ಈ ಬಜೆಟ್‌ನಲ್ಲಿಯೂ ಅದರ ಬಗ್ಗೆ ಉಲ್ಲೇಖೀಸಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ ಶೇ.0.3ರಷ್ಟು ಮಾತ್ರ ಬಜೆಟ್ ಹಣವನ್ನು ಖರ್ಚು ಮಾಡಿರುವುದು ಸರ್ಕಾರದ ದುರಹಂಕಾರ ನೀತಿಗೆ ಸಾಕ್ಷಿಯಾಗಿದೆ ಎಂದರು.