ಬಿಜ್ನೋರ್: ಯುವತಿಯೊಬ್ಬಳನ್ನು ಅಪಹರಿಸಿ, ಬಲವಂತವಾಗಿ ಮತಾಂತರ ಮಾಡಿದ ಹಿನ್ನೆಲೆಯಲ್ಲಿ ಮತಾಂತರ ನಿಗ್ರಹ ಕಾಯ್ದೆಯಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ಉತ್ತರಪ್ರದೇಶದ ಬಿಜ್ನೋರ್ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಾಖಿಬ್ ಎಂಬಾತ ಯುವತಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿರುವುದಾಗಿ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಕಳೆದ ಕೆಲವು ದಿನಗಳಿಂದ ಧಾಂಪುರ್ ನಿವಾಸಿ ಯುವತಿ ನಾಪತ್ತೆಯಾಗಿದ್ದಳು ಎಂದು ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಯುವತಿ ಹಾಗೂ ಆರೋಪಿಯನ್ನು ಪತ್ತೆಹಚ್ಚಿದ್ದರು. ವಿಚಾರಣೆಯಲ್ಲಿ ಆರೋಪಿ ಯುವತಿಯನ್ನು ಅಪಹರಿಸಿ, ಬಲವಂತವಾಗಿ ಮತಾಂತರ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡ ನಂತರ ಬಂಧಿಸಲಾಯಿತು ಎಂದು ಕುಮಾರ್ ಎಎನ್ ಐಗೆ ತಿಳಿಸಿದ್ದಾರೆ.
ಸಾಖಿಬ್ ತನ್ನ ನಿಜವಾದ ಗುರುತನ್ನು ಮರೆಮಾಚಿ, ತನ್ನನ್ನು ಸೋನು ಎಂಬ ಹೆಸರಿನಲ್ಲಿ ಯುವತಿ ಬಳಿ ಪರಿಚಯಿಸಿಕೊಂಡಿದ್ದ. ನಂತರ ಆಕೆಯನ್ನು ಅಪಹರಿಸಿ, ಬಲವಂತವಾಗಿ ಮತಾಂತರಿಸಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕಾನೂನು ಬಾಹಿರ ಧಾರ್ಮಿಕ ಮತಾಂತರ ಮತ್ತು ಎಸ್ ಸಿ/ಎಸ್ ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಹಿಂದು ಯುವತಿಯರ ಅಪಹರಣ ಮತ್ತು ಬಲವಂತದ ಮತಾಂತರ ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಕಳೆದ ನವೆಂಬರ್ ತಿಂಗಳಿನಲ್ಲಿ ಉತ್ತರಪ್ರದೇಶ ಸರ್ಕಾರ ಕಾನೂನು ಬಾಹಿರ ಧಾರ್ಮಿಕ ಮತಾಂತರ ನಿಗ್ರಹ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿತ್ತು.