ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ 20 ವರ್ಷದ ಯುವತಿಯ ಮೇಲೆ ನಾಲ್ವರು ದುರುಳುರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಗಂಭೀರ ಗಾಯಗೊಂಡಿರುವ ಯುವತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ವರದಿಯಾಗಿದೆ.
ಅತ್ಯಾಚಾರ ನಡೆಸಿದ ನಂತರ ದುರುಳರು ಹಲ್ಲೆ ನಡೆಸಿದ್ದರ ಪರಿಣಾಮ ಯುವತಿಯ ದೇಹದ ಮೇಲೆ ಗಂಭೀರ ಗಾಯಗಳಾಗಿದ್ದು, ನಾಲಗೆಯನ್ನು ಕೂಡ ಕತ್ತರಿಸಿ ಕ್ರೂರತನ ಮೆರದಿದ್ದಾರೆ. ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ದಾಖಲಿಸಬೇಕಾದ ಅನಿವಾರ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗಾಗಲೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.
ಅದಾಗ್ಯೂ ಘಟನೆ ಸೆಪ್ಟೆಂಬರ್ 14ರಂದೇ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೇ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.
ಹುಲ್ಲು ಕತ್ತರಿಸಿಲೆಂದು ತಾಯಿ ಮತ್ತು ತಂಗಿ ಹೊಲಕ್ಕೆ ತೆರಳಿದ್ದರು. ಈ ವೇಳೆ ತಾಯಿಗೆ ತಿಳಿಯದ ರೀತಿಯಲ್ಲಿ ತಂಗಿಯನ್ನು 4ರಿಂದ 5 ಜನರ ತಂಡ ಕುತ್ತಿಗೆಗೆ ಹಗ್ಗ ಸುತ್ತಿ ಎಳೆದೊಯ್ದಿದ್ದಾರೆ, ಮಾತ್ರವಲ್ಲದೆ ಸಾಮೂಹಿಕ ಅತ್ಯಾಚಾರ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ಥೆಯ ಸಹೋದರ ಮಾಧ್ಯಮಕ್ಕೆ ತಿಳಿಸಿದ್ದಾರೆ.