ಬೆಂಗಳೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ತಿನ 6 ಸ್ಥಾನಗಳ ಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಮಪಾಲು ಸಿಕ್ಕಿದೆ.
6 ಕ್ಷೇತ್ರಗಳ ಪೈಕಿ 3ರಲ್ಲಿ ಕಾಂಗ್ರೆಸ್, 2ರಲ್ಲಿ ಜೆಡಿಎಸ್ ಹಾಗೂ 1ರಲ್ಲಿ ಬಿಜೆಪಿ ಗೆದ್ದಿದೆ. ಪಕ್ಷವಾರು ಲೆಕ್ಕಚಾರ ನೋಡಿದರೆ ಬಿಜೆಪಿಗೆ ಹಿನ್ನಡೆ ಆಗಿದೆ. ಹಿಂದೆ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಇದ್ದ ಎರಡು ಕ್ಷೇತ್ರಗಳನ್ನು ಜೆಡಿಎಸ್ ಉಳಿಸಿಕೊಂಡಿದೆ. ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಕಾಂಗ್ರೆಸ್, ಅದರ ಜತೆಗೆ ಮತ್ತೆರಡು ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಪಡೆದುಕೊಂಡಿದೆ. ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ಮತ್ತೂಮ್ಮೆ ಗೆದ್ದಿದ್ದು, ಇಲ್ಲಿ ಮೈತ್ರಿ ಕೆಲಸ ಮಾಡಿದೆ. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಹಾಕದೆ ಜೆಡಿಎಸ್ ಅನ್ನು ಬೆಂಬಲಿಸಿತ್ತು. ಅದೇ ರೀತಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರ ಬಿಜೆಪಿ ಕಳೆದುಕೊಂಡಿದ್ದು, ಇಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಈ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.
ನೈಋತ್ಯ ಪದವೀಧರ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿ ಯಾಗಿದೆ. ಈ ಕ್ಷೇತ್ರವನ್ನು ಬಿಜೆಪಿ ಯಿಂದ ಆಯನೂರು ಮಂಜುನಾಥ್ ಪ್ರತಿನಿಧಿಸುತ್ತಿದ್ದರು. ಈ ಬಾರಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದಾರೆ. ಮಾಜಿ ಶಾಸಕ ರಘುಪತಿ ಭಟ್ ಅವರ ಬಂಡಾಯದ ನಡುವೆಯೂ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಕಾಂಗ್ರೆಸ್‌ನ ಆಯನೂರು ಮಂಜು ನಾಥ್ ವಿರುದ್ಧ 24 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಎಸ್.ಎಲ್. ಭೋಜೇ ಗೌಡರು ಕಾಂಗ್ರೆಸ್‌ನ ಕೆ.ಕೆ.ಮಂಜು ನಾಥ್ ಅವರನ್ನು ಮಣಿಸಿ ಸತತ 2ನೇ ಬಾರಿ ಮೇಲ್ಮನೆ ಪ್ರವೇಶಿಸಿದ್ದಾರೆ. ಸತತ 12 ವರ್ಷಗಳಿಂದ ಜೆಡಿಎಸ್‌ನಿಂದ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮರಿತಿಬ್ಬೇಗೌಡ ಈ ಬಾರಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಆದರೆ ಮೈತ್ರಿ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಗೆದ್ದು, ಮರಿತಿಬ್ಬೇಗೌಡರಿಗೆ ಸೋಲುಣಿಸಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯಾಗಿದ್ದ ಬಿಜೆಪಿಯ ವೈ.ಎ.ನಾರಾಯಣ ಸ್ವಾಮಿ ಅನಿರೀಕ್ಷಿತ ಸೋಲು ಕಂಡಿದ್ದು, ಕಾಂಗ್ರೆಸ್‌ನ ಡಿ.ಟಿ.ಶ್ರೀನಿವಾಸ್ ಗೆದ್ದಿದ್ದಾರೆ. ಸತತ ಸೋಲಿನ ಬಳಿಕ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಮೋಜಿಗೌಡ ಹಾಲಿ ಬಿಜೆಪಿ ಸದಸ್ಯ ಅ. ದೇವೇಗೌಡರನ್ನು ಮಣಿಸಿದ್ದಾರೆ.
ಜೆಡಿಎಸ್ ಸ್ಪರ್ಧಿಸಿದ್ದ ಎರಡು ಸ್ಥಾನವನ್ನೂ ಗೆದ್ದಿದ್ದೇವೆ. ಭೋಜೇಗೌಡರು ಉತ್ತಮ ಕೆಲಸ ಮಾಡಿದ್ದರು. ಹೀಗಾಗಿ ಅವರ ಗೆಲುವು ಸುಲಭ ಸಾಧ್ಯವಾಗಿದೆ. ಮತ್ತೂಂದೆಡೆ ವಿವೇಕಾನಂದ ಅವರನ್ನು ಕಣಕ್ಕಿಳಿಸಿದ್ದೆವು. ಅಲ್ಲೂ ಪ್ರಬುದ್ಧ ಮತದಾರರು ಜೆಡಿಎಸ್ ಅನ್ನು ಬೆಂಬಲಿಸಿದ್ದಾರೆ.
-ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ