ಬೆಂಗಳೂರು: ಮುಂದಿನ ವರ್ಷ ಜೂನ್‌ನಲ್ಲಿ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ತಲಾ 3 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಜ್ಜಾಗುತ್ತಿದ್ದು, ಶುಕ್ರವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ.
ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಮೇಲ್ಮನೆ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರಗೌಡ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಮರನಾಥ ಪಾಟೀಲ್ ಅವರ ಅವಧಿ 2018ರ ಜೂನ್ 18ಕ್ಕೆ ಮುಕ್ತಾಯಗೊಳ್ಳಲಿದೆ. ಈ ಮೂರೂ ಕ್ಷೇತ್ರಗಳು ಬಿಜೆಪಿ ವಶದಲ್ಲಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ನ ಮರಿತಿಬ್ಬೇಗೌಡ, ಈಶಾನ್ಯ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುತ್ತಿರುವ ಜೆಡಿಎಸ್‌ನ ರಮೇಶ್‌ಬಾಬು ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿಯ ಗಣೇಶ್ ಕಾರ್ಣಿಕ್
ಅವರ ಅವಧಿಯೂ ಇದೇ ವೇಳೆ ಮುಕ್ತಾಯಗೊಳ್ಳುತ್ತದೆ.
ಈ ಪೈಕಿ ಪದವೀಧರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನದ ಹಕ್ಕು ಪಡೆಯಲು ಪದವೀಧರರ ನೋಂದಣಿ ಕಾರ್ಯ ಆರಂಭವಾಗಿದ್ದು, ಮೊದಲ ಹಂತದ ನೋಂದಣಿ ಕಾರ್ಯ ನ. 7ಕ್ಕೆ ಕೊನೆಗೊಳ್ಳಲಿದೆ. ಡಿಸೆಂಬರ್‌ನಲ್ಲಿ 2ನೇ ಹಂತ ಮತ್ತು ಫೆಬ್ರವರಿಯಲ್ಲಿ 3ನೇ ಹಂತದ ನೋಂದಣಿ ಕಾರ್ಯ ನಡೆಯಲಿದ್ದು, ಸಾಮಾನ್ಯವಾಗಿ ಕಣದಲ್ಲಿರುವ ಅಭ್ಯರ್ಥಿಗಳೇ ಮುಂದೆ ನಿಂತು ಪದವೀಧರರನ್ನು ನೋಂದಣಿ ಮಾಡುತ್ತಾರೆ. ಈ ಕಾರಣಕ್ಕಾಗಿ ಮೊದಲ ಹಂತದ ನೋಂದಣಿ ಪ್ರಕ್ರಿಯೆ ಅಂತಿಮಗೊಳ್ಳುವ ಮುನ್ನವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಶುಕ್ರವಾರದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
2 ಕ್ಷೇತ್ರಗಳಿಗೆ ಭಾರೀ ಪೈಪೋಟಿ: ಮೂರು ಪದವೀಧರ ಕ್ಷೇತ್ರಗಳ ಪೈಕಿ ನೈಋತ್ಯ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮತ್ತು ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರಗೌಡ ಚುನಾವಣಾ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಕಾಣಿಸಿಕೊಂಡಿದೆ.
ನೈಋತ್ಯ ಪದವೀಧರ ಕ್ಷೇತ್ರದಿಂದ ತಮ್ಮ ಪುತ್ರ ಅರುಣ್ ಶಂಕರಮೂರ್ತಿ ಅವರನ್ನು ಕಣಕ್ಕಿಳಿಸಲು ಶಂಕರಮೂರ್ತಿ ತೀವ್ರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಜತೆಗೆ ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್ ಮತ್ತು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆಯನೂರು ಈ ಹಿಂದೆ ರಾಜ್ಯಸಭೆ ಸದಸ್ಯರಾಗಿದ್ದರಿಂದ ಸದ್ಯ ಅರುಣ್ ಮತ್ತು ಮಂಜುಳಾ ಹೆಸರು ಮುಂಚೂಣಿಯಲ್ಲಿದೆ. ಇನ್ನು ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಜ್ಯ ಬಿಜೆಪಿ ಸಹವಕ್ತಾರ ಎ.ಎಚ್.ಆನಂದ್ ಮತ್ತು ಕಲಾ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಜಯಶಂಕರ್ ಹೆಸರು ಕೇಳಿಬರುತ್ತಿದೆ. ಎಬಿವಿಪಿ ಮೂಲಕ ಬಿಜೆಪಿಗೆ ಪದಾರ್ಪಣೆ ಮಾಡಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿರುವ ಆನಂದ್ ಕಳೆದ ಬಾರಿಯೂ ಟಿಕೆಟ್‌ಗೆ ಪ್ರಯತ್ ಮಾಡಿದ್ದರಾದರೂ ರಾಮಚಂದ್ರಗೌಡ ಅವರೇ ಮತ್ತೆ ಕಣಕ್ಕಿಳಿದಿದ್ದರಿಂದ ಟಿಕೆಟ್ ಸಿಕ್ಕಿರಲಿಲ್ಲ. ಇನ್ನು ಜಯಶಂಕರ್ ಈಗಲೂ ಉಪನ್ಯಾಸಕ ವೃತ್ತಿಯಲ್ಲಿದ್ದಾರೆ. ಅಲ್ಲದೆ, ಅವರು ಎಡಪಂಥೀಯ ವಿಚಾರಧಾರೆ ಹೊಂದಿರುವವರೊಂದಿಗೆ ಗುರುತಿಸಿಕೊಂಡಿದ್ದರಿಂದ ಬಿಜೆಪಿಯ ಒಂದು ಬಣ ಇವರಿಗೆ ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ, ರಾಮಚಂದ್ರಗೌಡರೇ ಇವರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈಶಾನ್ಯ ಪದವೀಧರ ಕ್ಷೇತ್ರದಿಂದ ಮತ್ತೆ ಅಮರನಾಥ ಪಾಟೀಲ್ ಅವರೇ ಕಣಕ್ಕಿಳಿಯುವುದು ಬಹುತೇಕ ಖಚಿತ.
ಶಿಕ್ಷಕರ ಕ್ಷೇತ್ರ: ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಹಿಂದೆ ವೈ.ಎ.ನಾರಾಯಣಸ್ವಾಮಿ ಪ್ರತಿನಿಧಿಸುತ್ತಿದ್ದ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಬಿಎಂಪಿ ವಾರ್ಡ್ ಸದಸ್ಯೆ ಗೌರಮ್ಮ ಪುತ್ರ ಚೇತನ್ ಹೆಸರ ಕೇಳಿಬರುತ್ತಿದೆ. ಇವರು ವೈ.ಎ.ನಾರಾಯಣಸ್ವಾಮಿರಿಗೆ ಆಪ್ತರೂ ಆಗಿರುವುದರಿಂದ ಚೇತನ್‌ನನ್ನು ಗೆಲ್ಲಿಸಿಕೊಂಡು ಬರುವುದಾಗಿ ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕ್ಯಾ.ಗಣೇಶ್ ಕಾರ್ಣಿಕ್ ಅವರನ್ನೇ ಪುನರಾಯ್ಕೆ ಮಾಡಲು ಬಿಜೆಪಿ ತೀರ್ಮಾನಿಸಿದೆ. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿನಿಧಿಸುತ್ತಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇನ್ನೂ ಪ್ರಬಲ ಆಕಾಂಕ್ಷಿಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಶುಕ್ರವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಪದವೀಧರ ಕ್ಷೇತ್ರದ ಅಭ್ಯರ್ಥಿಗಲ ಆಯ್ಕೆ ಕುರಿತಂತೆ ಹೆಚ್ಚಿನ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.