ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನ ತಲಾ ಮೂರು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪ್ರಮುಖ ರಾಜಕೀಯ ಪಕ್ಷಗಳು ಸಿದ್ಧತೆ ತೀವ್ರಗೊಳಿಸಲಾರಂಭಿಸಿದೆ.
ಜೂ. 8ರಂದು ಈ ಆರು ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿ ಶನಿವಾರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಹೊಸ ಸರ್ಕಾರ ರಚನೆಯಾಗುತ್ತಲೇ ಅಂತಿಮ ಸುತ್ತಿನ ಸಿದ್ಧತೆ ಶುರುವಾಗಲಿದೆ.
ಆರು ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಆರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಆದರೆ, ಆಡಳಿತ ಪಕ್ಷ ಕಾಂಗ್ರೆಸ್ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ನೈರುತ್ಯ ಪದವೀಧರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರ ಹಾಗು ಆಗ್ನೆಯ ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಈಗಾಗಲೇ ಮೂರು ಪಕ್ಷದ ಘೋಷಿತ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ರಮೇಶ್‌ಬಾಬು (ಜೆಡಿಎಸ್), ಕರ್ನಾಟಕ ದಕ್ಷಿಣ ಶಿಕ್ಷಣ ಕ್ಷೇತ್ರದ ಮರಿತಿಬ್ಬೇಗೌಡ (ಜೆಡಿಎಸ್), ನೈರುತ್ಯ ಶಿಕ್ಷಕರ ಕ್ಷೇತ್ರದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ (ಬಿಜೆಪಿ), ನೈರುತ್ಯ ಪದವೀಧರ ಕ್ಷೇತ್ರದ ಡಿ.ಎಚ್.ಶಂಕರಮೂರ್ತಿ (ಬಿಜೆಪಿ- ಸಭಾಪತಿ), ಬೆಂಗಳೂರು ಪದವೀಧರ ಕ್ಷೇತ್ರದ ರಾಮಚಂದ್ರಗೌಡ (ಬಿಜೆಪಿ) ಹಾಗೂ ಈಶಾನ್ಯ ಪದವೀಧರ ಕ್ಷೇತ್ರದ ಅಮರನಾಥ ಪಾಟೀಲ್ (ಬಿಜೆಪಿ) ಅವರ ಅವಧಿ ಜೂನ್ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ.
ಆರು ಕ್ಷೇತ್ರಗಳ ಪೈಕಿ ಮೂರು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಎರಡು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದು, ಈ ಬಾರಿ ಅವುಗಳನ್ನು ಉಳಿಸಿಕೊಳ್ಳಲು ಎರಡೂ ಪಕ್ಷಗಳು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಕನಿಷ್ಟ ಮೂರು ಕ್ಷೇತ್ರಗಳನ್ನಾದರೂ ವಶಕ್ಕೆ ಪಡೆದುಕೊಳ್ಳುವ ಆಲೋಚನೆಯಲ್ಲಿದೆ.
ಬಿಜೆಪಿಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರರ ಕ್ಷೇತ್ರದಿಂದ ಅ.ದೇವೇಗೌಡ, ಈಶಾನ್ಯ ಪದವೀಧರರ ಕ್ಷೇತ್ರದಿಂದ ಕೆ.ಬಿ.ಶ್ರೀನಿವಾಸ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿ.ನಿರಂಜನ್ ಮೂರ್ತಿ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಹಾಲನೂರು ಎಸ್.ಲೇಪಾಕ್ಷಿ ಜೆಡಿಎಸ್‌ನ ಹಾಲಿ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮತ್ತು ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮತ್ತೆ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಪರೇರಾ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಬೋಜೆಗೌಡ, ಈಶಾನ್ಯ ಪದವೀಧರ ಕ್ಷೇತ್ರದಿಂದ ಪ್ರತಾಪ ರೆಡ್ಡಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಮಾಜಿ ಶಾಸಕ ಶಿವರಾಮೇಗೌಡ ಕಣದಲ್ಲಿದ್ದಾರೆ.
ಆಡಳಿತ ಪಕ್ಷ ಕಾಂಗ್ರೆಸ್‌ನಿಂದ ನೈರುತ್ಯ ಪದವೀಧರ ಕ್ಷೇತ್ರದಿಂದ ಎಚ್.ಬಿ. ದಿನೇಶ್, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರಗಳ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಕಾರ್ಯಪ್ರವೃತ್ತರಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಇನ್ನೂ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ತಕ್ಷಣ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.