ಮಂಡ್ಯ: ಕೋವಿಡ್ ಸೋಂಕಿತ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಸಿಐಟಿಯು, ಕರ್ನಾಟಕ ಪ್ರಾಂತ ರೈತಸಂಘ, ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್-19 ಸಂಕಷ್ಟದಲ್ಲಿ ಜನರ ಜೊತೆ ನಿಂತು ಆರ್ಥಿಕ ಸಂಕಷ್ಟ ಹಾಗೂ ಆರೋಗ್ಯ ರಕ್ಷಣೆಗೆ ಸರ್ಕಾರ ತೊಡಗಿಸಿ ಕೊಳ್ಳಬೇಕು. ಸೋಂಕನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆಗೆ ಕ್ರಮ ವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ.3ರಷ್ಟು ವೆಚ್ಚ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲ ಕುಟುಂಬಗಳಿಗೆ ಮಾಸಿಕ 7,500 ರೂ. ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.
ಆಹಾರ, ಆರೋಗ್ಯ ಕಿಟ್ ಕಲ್ಪಿಸಿ: ಎಲ್ಲ ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ ಸಮಗ್ರ ಆಹಾರ ಸಾಮಗ್ರಿ, ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್ ಕಲ್ಪಿಸಬೇಕು. ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲ ಪಡಿಸಲು ಜಿಡಿಪಿಯ ಶೇ.5ನ್ನು ಸಾರ್ವಜನಿಕ ಆರೋಗ್ಯ ವಲಯಕ್ಕೆ ಮೀಸಲಿಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಖಾಸಗೀ ಕರಣವನ್ನು ನಿಲ್ಲಿಸಿ, ಎಲ್ಲರಿಗೂ ಉಚಿತ ಸಾರ್ವತ್ರಿಕ ಆರೋಗ್ಯ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಎಲ್ಲರಿಗೂ ಉದ್ಯೋಗ ನೀಡಿ: ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕುಟುಂಬಕ್ಕೆ ತಲಾ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ 600 ರೂ. ಹೆಚ್ಚಿಸಬೇಕು. ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10 ಸಾವಿರ ರೂ. ನೀಡಬೇಕು. ಎಲ್ಲ ರೀತಿಯ ಕಾರ್ಮಿಕರಿಗೆ ಲಾಕ್‌ಡೌನ್ ಅವಧಿಯ ವೇತನ ನೀಡುವಂತೆ ಕ್ರಮ ವಹಿಸಬೇಕು. ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಯಿಸಿದರು.
ವಿಶೇಷ ಪ್ಯಾಕೇಜ್ ನೀಡಿ: ಸರ್ಕಾರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಬಿಸಿಯೂಟ ನೌಕರರಿಗೆ ಏಪ್ರಿಲ್, ಮೇ ,ಜೂನ್ ತಿಂಗಳ ವೇತನವನ್ನು ನೀಡಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಬಾಕಿ ಇರುವ 18 ತಿಂಗಳ ವೇತನ ನೀಡಬೇಕು. ಬೀಡಿ ಕಾರ್ಮಿ ಕರು, ಬೀದಿಬದಿ ವ್ಯಾಪಾರಿಗಳು ಮತ್ತು ಮನೆ ಕೆಲಸದ ಕಾರ್ಮಿಕರು, ಇತರೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಿ, ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಿರ್ವಹಿಸಬೇಕು ಎಂದು ಆಗ್ರಹಿಸಿದರು.
ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಂ.ಪುಟ್ಟಮಾಧು, ಎಲ್.ಕೃಷ್ಣೇಗೌಡ, ಟಿ.ಯಶವಂತ, ಸಿ.ಕುಮಾರಿ, ಎಂ.ಎಂ. ಶಿವಕುಮಾರ್, ಶ್ರೀನಿವಾಸ್ ಹಾಜರಿದ್ದರು.