Advertisement

ಅನುದಾನ ಸಮರ್ಪಕ ಬಳಸಿ

11:58 AM Oct 24, 2017 | Team Udayavani |

ಬೀದರ: ವಿವಿಧ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ವಿನಿಯೋಗಿಸಬೇಕು
ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ನೋಡೆಲ್‌ ಕಾರ್ಯದರ್ಶಿ ಡಾ|ಇ.ವಿ. ರಮಣರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಸೋಯಾಬಿನ್‌ ಬೆಳೆ ಕಟಾವು ಮಾಡಲಾಗುತ್ತಿದೆ. ಈಗಾಗಲೇ ಬಿತ್ತನೆಯಾಗಿ ಮಳೆಯಿಂದ ಹಾನಿಯಾದ ರೈತರಿಗೆ ಪುನಃ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ತೊಗರಿ ಬೆಳೆಯು ಉತ್ತಮ ಸ್ಥಿತಿಯಲ್ಲಿದೆ ಎಂದು ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ. ಸಭೆಗೆ ತಿಳಿಸಿದರು.

ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ|ಡಿ.ಎಸ್‌. ಹವಾಲ್ದಾರ್‌ ಮಾತನಾಡಿ, ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ. ಔರಾದ ಹಾಗೂ ಬಸವಕಲ್ಯಾಣ ತಾಲೂಕುಗಳ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿದ್ದು, ಉಳಿದ ತಾಲೂಕುಗಳ ಫಲಾನುಭವಿಗಳ ಆಯ್ಕೆ ಪಟ್ಟಿಯು ಶಾಸಕರ ಹಂತದಲ್ಲಿದ್ದು, ಕಚೇರಿಗೆ ಕಳುಹಿಸಿದ ಕೂಡಲೇ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಡಿಆರ್‌ಡಿಎ ಯೋಜನಾ ನಿರ್ದೇಶಕ ರಾಮಕೃಷ್ಣ ಮಾತನಾಡಿ, ದೇವರಾಜ ಅರಸ್‌, ಪ್ರಧಾನ ಮಂತ್ರಿ ವಸತಿ ಯೋಜನೆ,
ಬಸವ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ 9,662 ಮನೆ ನಿರ್ಮಿಸುವ ಗುರಿ ಹೊಂದಿದ್ದು, ಈವರೆಗೆ 2,029
ಮನೆಗಳನ್ನು ನಿರ್ಮಿಸಲಾಗಿದೆ. ಹಲವೆಡೆ ನಿವೇಶನ ಸಮಸ್ಯೆಯಿದೆ ಎಂದು ಸಭೆಗೆ ತಿಳಿಸಿದರು.

Advertisement

ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಕಾರ್ಯದರ್ಶಿಗಳು, ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಜತೆಗೂಡಿ ಚರ್ಚಿಸಿ ನಿವೇಶನ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅರಣ್ಯ ಇಲಾಖೆ, ರೇಷ್ಮೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಜೆಸ್ಕಾಂ, ನಿರ್ಮಿತಿ ಕೇಂದ್ರ, ಸಾಮಾಜಿಕ ಭದ್ರತೆ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಸ್ವತ್ಛ ಭಾರತ ಅಭಿಯಾನ, ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕ ಸರಬರಾಜು, ಪದವಿಪೂರ್ವ ಶಿಕ್ಷಣ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ನಡೆಯಿತು. ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ರ್‌.ಸೆಲ್ವಮಣಿ, ಸಹಾಯಕ ಆಯುಕ್ತರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next