ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ಬಳಸಿಕೊಂಡು ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಆರೋಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ಕಾರ್ಯಗಾರ’ ಉದ್ಘಾಟಿಸಿ ಮಾತನಾಡಿದರು.
ಮನೆಯಲ್ಲಿ ಆಗೊಮ್ಮೆ ಈಗೊಮ್ಮೆ ಅತ್ತೆ-ಸೊಸೆಯರ ನಡುವೆ ಜಗಳ ನಡೆಯುವುದು ಸಾಮಾನ್ಯ. ಆದರೆ ಈಗ ತಾಯಿ ಮತ್ತು ಮಗಳಿಗೆ ಜಗಳ ತಂದಿಡುವ ಕೆಲಸ ಆಗುತ್ತಿದೆ ಎಂದು ದೂರಿದರು. ಕುವೆಂಪು ಅವರು ಜೈ ಭಾರತ ಜನನಿಯ ತನುಜಾತೇ ಜಯಹೇ ಕರ್ನಾಟಕ ಮಾತೆ ಎಂದರು. ಹೀಗಾಗಿ ಉಳಿದೆಲ್ಲಾ ನೆರೆ ಹೊರೆ ರಾಜ್ಯಗಳು ನಮ್ಮ ಸಹೋದರ ಮತ್ತು ಸಹೋದರಿ ರಾಜ್ಯಗಳಾಗಿವೆ. ಆ ಹಿನ್ನೆಲೆಯಲ್ಲಿ ಪರಸ್ಪರ ಸಂಘರ್ಷಕ್ಕೆ ಅವಕಾಶ ನೀಡದೆ ನಮ್ಮ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸೋಣ ಎಂದು ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮಾತನಾಡಿ, ಇಲಾಖೆಯನ್ನು ಅರ್ಥ ಮಾಡಿಕೊಳ್ಳುವ ಜತೆಗೆ ಸೌಹಾರ್ದತೆ ಕಾಪಾಡಿಕೊಂಡು ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಾಗಿದೆ ಎಂದು ತಿಳಿಸಿದರು. ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮ ಶೇಖರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆ: ಭಾಷಾ ಮಾಧ್ಯಮ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲದ ತೀರ್ಪಿನ ಪುನರ್ ಪರಿಶೀಲನೆಗೆ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಾಷಾ ಮಾಧ್ಯಮ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ಪೋಷಕರ ವಿವೇಚನೆಗೆ ಬಿಟ್ಟಿದೆ.
ಇದರಿಂದಾಗಿ ಪ್ರಾದೇಶಿಕ ಆಸ್ಮಿತೆ ಉಳಿಸಿಕೊ ಳ್ಳಲು ಸಾಧ್ಯವಿಲ್ಲ. ಆ ಹಿನ್ನೆಲೆಯಲ್ಲಿ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸುವ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು. ನೆರೆ ರಾಜ್ಯಗಳೊಂದಿಗೂ ಚರ್ಚಿಸಿ, ಆ ರಾಜ್ಯಗಳು ಅಪೇಕ್ಷೆ ಪಟ್ಟರೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಲು ಕರ್ನಾಟಕ ಸಿದ್ಧವಿದೆ ಎಂದರು.