ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಉತ್ತರ ಪ್ರದೇಶ ರಾಜ್ಯಾದ್ಯಂತ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರಗಳು ನಡೆದಿದ್ದು ಇದಕ್ಕೆ ಕುಮ್ಮಕ್ಕು ನೀಡಿದ ಕಾರಣಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಸಂಘಟನೆಯನ್ನು ನಿಷೇಧಿಸುವಂತೆ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರಕಾರವು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ.
ಯೋಗಿ ಸರಕಾರ ತನಗೆ ಕಳುಹಿಸಿರುವ ಪತ್ರದ ಆಧಾರದಲ್ಲಿ ಕೇಂದ್ರ ಗೃಹ ಇಲಾಖೆಯು ಕಾನೂನು ಅಭಿಪ್ರಾಯವನ್ನು ಪಡೆದುಕೊಂಡು ಮುಂದಿನ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಈ ನಡುವೆ ಉತ್ತರ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯು ಗುಪ್ತಚರ ಇಲಾಖೆಯೂ ಮತ್ತು ಎನ್.ಐ.ಎ. ಸೇರಿದಂತೆ ಕೇಂದ್ರ ಸರಕಾರ ಸಂಸ್ಥೆಗಳಿಂದ ಮಾಹಿತಿಯನ್ನು ಪಡೆದುಕೊಳ್ಳಲು ನಿರ್ಧರಿಸಿದೆ.
ಇದಕ್ಕೂ ಮೊದಲು ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿರುವ ಒ.ಪಿ.ಸಿಂಗ್ ಅವರು ಪಿ.ಎಫ್.ಐ. ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಗೃಹ ಇಲಾಖೆಗೆ ಪತ್ರವನ್ನು ಬರೆದಿದ್ದರು. ಇದೀಗ ಈ ಪ್ರಸ್ತಾಪವನ್ನು ಪರಿಶೀಲನೆಗಾಗಿ ಕೆಂದ್ರ ಗೃಹ ಇಲಾಖೆಗೆ ರಾಜ್ಯ ಸರಕಾರ ಕಳುಹಿಸಿಕೊಟ್ಟಿದೆ.
ನಿಷೆಧಿತ ಸಿಮಿ ಸಂಘಟನೆಯ ಹಲವಾರು ಕಾರ್ಯಕರ್ತರು ಇದೀಗ ಪಿ.ಎಫ್.ಐ. ಸಂಘಟನೆಯಲ್ಲಿ ಸಕ್ರಿಯರಾಗಿದ್ದು ರಾಜ್ಯದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆಗಳ ಸಂದರ್ಭದಲ್ಲಿ ಈ ಸಂಘಟನೆಯ ಸುಮಾರು 22 ಜನರನ್ನು ಬಂಧಿಸಲಾಗಿತ್ತು ಎಂಬ ಮಾಹಿತಿಯನ್ನು ಡಿಜಿಪಿಯವರು ನೀಡಿದ್ದಾರೆ.
ದೆಹಲಿ, ಆಂಧ್ರಪ್ರದೇಶ, ಅಸ್ಸಾಂ, ಪಶ್ಚಿಮಬಂಗಾಲ, ಕೇರಳ, ಜಾರ್ಖಂಡ್, ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಪಿ.ಎಫ್.ಐ. ಸಂಘಟನೆ ಸಕ್ರಿಯವಾಗಿದೆ ಎಂಬ ಮಾಹಿತಿಯನ್ನೂ ಸಹ ಡಿಜಿಪಿ ಒಪಿ ಸಿಂಗ್ ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.