Advertisement

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ; ಹಲವು ಗ್ರಾಮ ಜಲಾವೃತ, ಪ್ರವಾಹ ಭೀತಿ

09:14 AM Aug 04, 2019 | Nagendra Trasi |

ಬೆಳಗಾವಿ/ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಟ್ಟ ಪರಿಣಾಮ ಉತ್ತರಕರ್ನಾಟಕದ ಕೆಲವು ಜಿಲ್ಲೆಗಳಿಗೆ ಪ್ರವಾಹ ಭೀತಿ ಎದುರಾಗಿದೆ.

Advertisement

ಕೊಯ್ನಾ ಜಲಾಶಯದಿಂದ 20ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದಿರುವುದರಿಂದ ಬೆಳಗಾವಿ ಬಾಗಲಕೋಟೆ, ವಿಜಯಪುರ, ರಾಯಚೂರು ಯಾದಗಿಗಿ ಜಿಲ್ಲೆಗಳಲ್ಲಿನ ಜನರು ಪ್ರವಾಹ ಭೀತಿಗೆ ಒಳಗಾಗಿದ್ದಾರೆ.

ಬಾಗಲಕೋಟೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ ಎಂದು ವರದಿ ತಿಳಿಸಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಾ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಇಲ್ಲಿ 50 ಕುಟುಂಬಗಳು ವಾಸಿಸುತ್ತಿದ್ದು, ಜಿಲ್ಲಾಡಳಿತ ಜನರನ್ನು ಸುರಕ್ಷಿತವಾಗಿ ಬೇರೆಡೆ ಸಾಗಿಸಲು ಬೋಟ್ ವ್ಯವಸ್ಥೆ ಮಾಡಿರುವುದಾಗಿ ಮೂಲಗಳು ತಿಳಿಸಿವೆ.

ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ಯಡೂರವಾಣಿ, ಡೋಣಿ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Advertisement

ಸದಲಗಾ, ಬೋರಾಗಾಂವ್ ಸೇರಿದಂತೆ ತಗ್ಗುಪ್ರದೇಶಗಳಲ್ಲಿರುವ 9 ಸೇತುವೆಗಳು ಮುಳುಗಡೆಯಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಜಮಖಂಡೊ-ಮೀರಜ್ ನಡುವಿನ ರಾಜ್ಯ ಹೆದ್ದಾರಿ ಬಂದ್ ಆಗಿರುವುದಾಗಿ ವರದಿ ವಿವರಿಸಿದೆ.

ಕೃಷ್ಣಾ ನದಿ ತೀರದಲ್ಲಿ ಡಂಗುರ ಸಾರುವ ಮೂಲಕ  ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗುತ್ತಿದೆ. ಚಿಕ್ಕೋಡಿಯಲ್ಲಿ ಆತಂಕದ ಪರಿಸ್ಥಿತಿ ಎದುರಾಗಿದ್ದು, ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಜನಪ್ರತಿನಿಧಿಗಳು ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next