Advertisement

ವಿ.ಸೋಮಣ್ಣಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ

07:40 AM Sep 12, 2017 | |

ಬೆಂಗಳೂರು: ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯ ವಿ.ಸೋಮಣ್ಣ ಅವರಿಗೆ ಬಿಜೆಪಿಯಲ್ಲಿ ಬಡ್ತಿ ನೀಡಲಾಗಿದ್ದು, ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನದ ಜತೆಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

Advertisement

ಇದರೊಂದಿಗೆ ಸೋಮಣ್ಣ ಅವರು ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯೂ ಹೆಚ್ಚಾಗಿದೆ. ಹನೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂಬುದು ಸೋಮಣ್ಣ ಅವರ ಪ್ರಮುಖ ಬೇಡಿಕೆಯೂ ಆಗಿತ್ತು.

ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿಗೆ ಬಲ ತುಂಬಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಸೋಮಣ್ಣ ಅವರನ್ನು ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸುವುದರ ಜತೆಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿಯಾಗಿಯೂ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೋಮವಾರ ಹೊರಡಿಸಿರುವ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹನೂರು ಮೇಲೆ ಕಣ್ಣಿಟ್ಟಿದ್ದರು:
ಈ ಹಿಂದೆ ಬೆಂಗಳೂರಿನ ವಿಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ವಿ.ಸೋಮಣ್ಣ ಅವರು  ನಂತರದಲ್ಲಿ ಬಿಜೆಪಿ ಸೇರಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿದರಾದರೂ ಸೋಲು ಅನುಭವಿಸಿದ್ದರು. ಹೀಗಾಗಿ ಅವರನ್ನು ವಿಧಾನ ಪರಿಷತ್ತಿಗೆ ಕಳುಹಿಸಿಕೊಡಲಾಗಿತ್ತು.

ಈ ಮಧ್ಯೆ ವಿಜಯನಗರ ಮತ್ತು ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಚಿವ ಎಂ.ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾಕೃಷ್ಣ ಪ್ರಭಾವ ಹೆಚ್ಚಾಗಿದ್ದರಿಂದ ಸೋಮಣ್ಣ ಅವರು ಬೆಂಗಳೂರು ಬಿಟ್ಟು ಬೇರೆ ಕಡೆ ತೆರಳಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸಿಕ್ಕಿದ್ದು ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರ. ಚಾಮರಾಜನಗರ ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವ ಹೊಂದಿರುವ ಕಾರಣ ಈ ಕ್ಷೇತ್ರ ಅವರಿಗೆ ಹೆಚ್ಚು ಆಪ್ಯಾಯಮಾನವಾಯಿತು. ಹೀಗಾಗಿ ತಮ್ಮ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹನೂರು ಕ್ಷೇತ್ರವನ್ನು ಅವರು ಆಯ್ಕೆಮಾಡಿಕೊಂಡಿದ್ದರು.

Advertisement

ಆದರೆ, ಕಳೆದ ಮಾರ್ಚ್‌ ತಿಂಗಳಲ್ಲಿ ಕ್ಷೇತ್ರದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದು ಸೋಮಣ್ಣ ಅವರಲ್ಲಿ ಅಸಮಾಧಾನ ಉಂಟುಮಾಡಿತ್ತು. ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದರಿಂದ ಅವರು ಕಾಂಗ್ರೆಸ್‌ ಸೇರುವ ಊಹಾಪೋಹವೂ ಸೃಷ್ಟಿಯಾಗಿ ಕೊನೆಗೆ ಯಡಿಯೂರಪ್ಪ ಅವರ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಪರಿಹಾರವಾಗಿತ್ತು.

ಇದಾದ ಬಳಿಕ ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ವೇಳೆ ಮತ್ತೆ ಸಕ್ರಿಯರಾದ ಸೋಮಣ್ಣ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಮುಂಚೂಣಿಯಲ್ಲಿ ನಿಂತು ಪ್ರಚಾರ ಮಾಡಿದ್ದರು. ಆ ಮೂಲಕ ಚಾಮರಾಜನಗರ ಜಿಲ್ಲೆಯಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿದ್ದರು. ಇದೀಗ ಪಕ್ಷದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಲಭಿಸಿರುವುದರಿಂದ ಸೋಮಣ್ಣ ಹನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next