ಮೈಸೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರ ಪೊಲೀಸ್ ಘಟಕದಿಂದ ನೂತನವಾಗಿ ನಿರ್ಮಿಸಲಾಗಿರುವ ಹೆಬ್ಟಾಳು ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಈಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ. ಬಾಕಿ ಇರುವ ಏಳು ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಮೂಲಕ ಪೊಲೀಸ್ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಕಳೆದ ಮೂರು ವರ್ಷಗಳಲ್ಲಿ ಶೇ.49 ಪೊಲೀಸರಿಗೆ ಸರಕಾರ ವಸತಿ ಗೃಹ ವ್ಯವಸ್ಥೆ ಕಲ್ಪಿಸಿದ್ದು, ಒಂದು ಕೋಣೆಯ ಮನೆಗಳ ಬದಲು ಎರಡು ಕೋಣೆ ಇರುವ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಗೃಹ 20-25 ಯೋಜನೆಯಡಿ ನಾಲ್ಕು ಸಾವಿರ ಕೋಟಿ ರೂ. ವೆಚ್ಚದಲ್ಲಿ 11 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದರೊಂದಿಗೆ 200 ಕೋಟಿ ರೂ. ವೆಚ್ಚದಲ್ಲಿ ರಾಜ್ಯದೆಲ್ಲೆಡೆ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.