ಕೊಪ್ಪಳ: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್-19 ಲಸಿಕೆ ಪಡೆಯುವುದು ಕಡ್ಡಾಯವಾಗಿದ್ದು, ಮೊಲದ ಲಸಿಕೆ ಪಡೆದವರಿಗೆ 2ನೇ ಡೋಸ್‌ನ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಹಶೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಹಶೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.
ಮಹಾಮಾರಿ ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನೂ ಮೊದಲ ಡೋಸ್ ಲಸಿಕೆ ಹಾಕಿಸಿಕೊಳ್ಳದೇ ಇರುವವರಿಗೆ ಲಸಿಕೆ ಪಡೆದುಕೊಳ್ಳಲು ಅರಿವು ಮೂಡಿಸಿ. ಈಗಾಗಲೇ ಮೊದಲ ಡೋಸ್ ಪಡೆದವರ ಪೈಕಿ ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ ತುಂಬಾ ಕಡಿಮೆ ಇದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ, 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. 1ನೇ ಡೋಸ್ ಲಸಿಕೆ ಪಡೆದಎಲ್ಲರಿಗೂ 2ನೇ ಡೋಸ್ ಲಸಿಕೆ ಹಾಕಿಸಬೇಕು ಎಂದರು.
ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಿಲ್ಲೆಯ ಎಲ್ಲ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಕಡ್ಡಾಯವಾಗಿದ್ದು, ಕಾಲೇಜು ವಿದ್ಯಾರ್ಥಿಗಳಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವರಿಕೆ ಮಾಡಿದರು.
ಸಭೆಯಲ್ಲಿ ಎಡಿಸಿ ಎಂ.ಪಿ. ಮಾರುತಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಹೇಮಂತ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರ್‌ರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.