ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯ ನಾಶಗಳ ಕುರಿತು ನನ್ನ ಕಚೇರಿಯಲ್ಲಿ ಯಾವುದಾದರೂ ವ್ಯಕ್ತಿಗಳ ಜತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಹೇಳಿದ್ದು, ನಾನು ಆರೋಪಿಯ ಮುಖವನ್ನೇ ನಾನು ನೋಡಿಲ್ಲ ಎಂದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ನನಗಿದೆ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಷ್ಟಕ್ಕೂ ವಿಕಾಸಸೌಧದ ಕೊಠಡಿಯು ಸರಕಾರ ನೀಡಿರುವ ಕಚೇರಿ. ಅದು ನನ್ನ ಸ್ವಂತ ಮನೆಯಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದವರೆಲ್ಲರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ ದದ್ದಲ್ ಸಹಿತ ಕೆಲವರ ಸಭೆ ನಡೆಸಿ ಸಾಕ್ಷ್ಯ ನಾಶ ಮಾಡಿದ್ದೇನೆ ಎಂಬ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಅಂದು ಲೋಕಸಭಾ ಕ್ಷೇತ್ರದ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿತ್ತು. ಹಾಗಾಗಿ ಕಚೇರಿಗೆ ಭೇಟಿ ನೀಡಿರಲಿಲ್ಲ. ಒಂದು ವೇಳೆ ನಾನು ನನ್ನ ಕಚೇರಿಯಲ್ಲಿ ಸಭೆ ನಡೆಸಿದ್ದರೆ, ಸಿಸಿಟಿವಿಯ ಫೂಟೇಜ್‌ಗಳನ್ನು ತೆಗೆದು ಪರಿಶೀಲಿಸಲಿ ಎಂದರು.
ಆರೋಪಿ ಮುಖವನ್ನೇ ನೋಡಿಲ್ಲ:
ಎಸ್‌ಐಟಿ ವಶದಲ್ಲಿರುವ ವ್ಯಕ್ತಿಯ ಮುಖವೂ ನೋಡಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಎಂದು ಎಲ್ಲಾದರೂ ಹೇಳಿರುವ ಬಗ್ಗೆ ವರದಿಯಾಗಿದೆಯೇ? ಆರೋಪಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. ಈ ಬಗ್ಗೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅದನ್ನು ಎಸ್‌ಐಟಿ ಅವರು ವಿಚಾರಣೆ ಮಾಡುತ್ತಾರೆ. ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದಿದ್ದಾರೆ.