Advertisement

ವಾಲ್ಮೀಕಿ ನಿಗಮದ ಅಕ್ರಮ: ಇಬ್ಬರು ಅಧಿಕಾರಿಗಳ ಸೆರೆ

08:56 PM Jun 01, 2024 | Team Udayavani |

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಬೇರೆಡೆ ವರ್ಗಾವಣೆಯಾದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ.

Advertisement

ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಮಾಜಿ ಲೆಕ್ಕಾಧಿಕಾರಿ ಪರಶುರಾಮ್‌ ಜಿ.ದುರ್ಗಣ್ಣನವರ್‌ ಬಂಧಿತರು. ನಿಗಮದ ವ್ಯವಸ್ಥಾಪಕ ಎ.ರಾಜಶೇಖರ್‌ ಮೇ 28ರಂದು ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿತ್ತು. ಹೀಗಾಗಿ ಶನಿವಾರ ಸಿಐಡಿ ಕಚೇರಿಯಲ್ಲಿ ಇಬ್ಬರನ್ನೂ ವಿಚಾರಣೆ ನಡೆಸಿ, ಬಂಧಿಸಲಾಗಿದೆ. ಬಳಿಕ ಕೋರ್ಟ್‌ಗೆ ಹಾಜರುಪಡಿಸಿ ಆರು ದಿನಗಳ ಕಾಲ ಎಸ್‌ಐಟಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 30ರಂದು ಈ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿತ್ತು.

ನಿಗಮದ ಪ್ರಧಾನ ವ್ಯವಸ್ಥಾಪಕ ಎ.ರಾಜಶೇಖರ್‌ ಮೇ 28ರಂದು ಹೈಗ್ರೌಂಡ್ಸ್‌ ಠಾಣೆಯಲ್ಲಿ ನೀಡಿದ ದೂರಿನ್ವಯ ಪೊಲೀಸರು ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಣಿಮೇಖಲೈ, ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾದ ನಿತೇಶ್‌ ರಂಜನ್‌, ರಾಮಸುಬ್ರಮಣಿಯಂ, ಸಂಜಯ್‌ ರುದ್ರ, ಪಂಕಜ್‌ ದ್ವಿವೇದಿ ಹಾಗೂ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರೌಲ್‌ ವಿರುದ್ಧ ಎಫ್ಐಆರ್‌ ದಾಖಲಿಸಿದ್ದರು.

ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸ್‌
ಮೇ 26ರಂದು ನಿಗಮದ ಅಧೀಕ್ಷಕ ಚಂದ್ರಶೇಖರ್‌ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಚಂದ್ರಶೇಖರ್‌ ಪರಿಶಿಷ್ಟ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಉಲ್ಲೇಖಿಸಲು ಎಸ್‌ಐಟಿ ಅಧಿಕಾರಿಗಳು ಸ್ಥಳೀಯ ಕೋರ್ಟ್‌ನ ಅನುಮತಿಯನ್ನು ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next