ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಒತ್ತಡ ಹೆಚ್ಚುತ್ತಿದ್ದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಟಿವಿ ವಾಹಿನಿಗೆ ಮಾಹಿತಿ ನೀಡಿದ ನಾಗೇಂದ್ರ ಇದುವರೆಗೆ ರಾಜೀನಾಮೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ ಬಿ.ನಾಗೇಂದ್ರಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಸ್‌ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರ ಜತೆಗೆ 50 ಕೋಟಿ ರೂ.ಗೂ ಹೆಚ್ಚಿನ ಹಣ ದುರುಪಯೋಗವಾಗಿರುವ ಕಾರಣದಿಂದಾಗಿ ಸಿಬಿಐ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.
ತನಿಖೆಗೆ ಮುಂದಾಗಿರುವ ಸಿಬಿಐ ಒಂದು ವೇಳೆ ಸಚಿವ ನಾಗೇಂದ್ರ ಅವರನ್ನು ಬಂಧಿಸಿದರೆ ಅಥವಾ ವಿಚಾರಣೆಗೊಳಪಡಿಸಿದರೆ ಸರ್ಕಾರಕ್ಕೆ ಮುಜುಗರ ಉಂಟಾಗುವ ಸಾಧ್ಯತೆಗಳಿವೆ ಎಂಬ ಅಂಶದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿತ್ತು. ಕೆಲ ದಿನಗಳ ಹಿಂದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕೂಡಾ ಸಚಿವರ ರಾಜೀನಾಮೆ ಪಡೆದು ಮುಖಭಂಗ ತಪ್ಪಿಸಿ ಎಂದು ಸಿಎಂಗೆ ಸೂಚಿಸಿದ್ದರು. ಹೀಗಾಗಿ ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.