ಜೇವರ್ಗಿ: ಮಹರ್ಷಿ ವಾಲ್ಮೀಕಿ ರಾಮಾಯಣ ದರ್ಶನಂ ಮಹಾಕಾವ್ಯ ರಚಿಸುವ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳಿಂದ ಜಗತ್ತಿನಾದ್ಯಂತ ಮುನಿವರ್ಯರು, ದಾರ್ಶನಿಕರು, ಚಿಂತಕರಾದಿಯಾಗಿ ಜನ ಸಾಮಾನ್ಯರಿಂದಲೂ ಗೌರವಕ್ಕೆ ಪಾತ್ರವಾದ ಮಹಾಕಾವ್ಯ ರಾಮಾಯಣ ರಚಿಸುವ ಮೂಲಕ ಜಗತ್ತಿಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.
ಸಮಾಜದಲ್ಲಿನ ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಾಗಿದೆ ಎಂದರು.
ಮಹರ್ಷಿ ವಾಲ್ಮೀಕಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಈರಗಂಟೆಪ್ಪ ವಡಗೇರಾ, ತಹಶೀಲ್ದಾರ್ ವಿನಯಕುಮಾರ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ, ಗ್ರೇಡ್-2 ತಹಶೀಲ್ದಾರ್ ರಮೇಶ ಹಾಲು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ ನಾಯಕ, ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ಧು ಪಾಟೀಲ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಡಿ.ಬಿ. ಪಾಟೀಲ, ರಾಜಶೇಖರ ಸೀರಿ, ಮಹಿಮೂದ್ ನೂರಿ, ಗುರುರಾಜ ಸೂಲಹಳ್ಳಿ, ಭೀಮರಾಯ ನಗನೂರ, ಮರೆಪ್ಪ ಹಸನಾಪುರ, ರಹಿಮಾನ್ ಪಟೇಲ್, ಚಂದ್ರಶೇಖರ ನೇರಡಗಿ, ಮರೆಪ್ಪ ಸರಡಗಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹರ್ಷಿ ವಾಲ್ಮೀಕಿ ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.