ಮೈಸೂರು: ವರುಣಾ ಕ್ಷೇತ್ರದ ಎಲ್ಲಾ ಗ್ರಾಮಗಳ ಉಳಿದ ರಸ್ತೆಗಳ ಕಾಮಗಾರಿಯನ್ನು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಗುರುವಾರ ವರುಣಾ ಕ್ಷೇತ್ರದ ಸುತ್ತೂರಿನಲ್ಲಿ ಕಬಿನಿ ನದಿ ಬಳಿ 45 ಲಕ್ಷ ರೂ. ವೆಚ್ಚದಲ್ಲಿ ಸೋಪಾನಕಟ್ಟೆ ನಿರ್ಮಾಣಕ್ಕೆ ಹಾಗೂ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಿಂದೆಂದೂ ಆಗದಂತಹ ಕಾಮಗಾರಿಗಳು ಕ್ಷೇತ್ರದಲ್ಲಿ ಆಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರು, ದಲಿತರು, ಹಿಂದುಳಿದವರ ಪರವಾಗಿ ಕೆಲಸ ಮಾಡುತ್ತಿದ್ದು, ಹಸಿವುಮುಕ್ತ, ಗುಡಿಸಲು ಮುಕ್ತ, ಶೌಚಾಲಯ ಮುಕ್ತ ಕರ್ನಾಟಕ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು.
ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕೊಡಲು ಸಾವಿರಾರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಮೆಡಿಕಲ್ ಕಾಲೇಜುಗಳು, ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತ ಚಿಕಿತ್ಸೆ, ಹೊಸ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಸುಮಾರು 50 ಸಾವಿರ ಕೋಟಿ ಖರ್ಚು ಮಾಡಿ ನಾಲೆಗಳ ಆಧುನೀಕರಣಗೊಳಿಸಲಾಗಿದೆ.
ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿಕೊಡುವುದಾಗಿ ಭರವಸೆ ನೀಡಿದರು. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ ಮಾತನಾಡಿ, ಕಳೆದ ನಾಲ್ಕು ವರ್ಷದಲ್ಲಿ ಕ್ಷೇತ್ರದ ಶೇ. 90ರಷ್ಟು ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ.
ಉಳಿದ ಕೆಲಸವನ್ನು ಆದ್ಯತೆಯ ಮೇಲೆ ಒಂದು ವರ್ಷದ ಅವಧಿಯಲ್ಲಿ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಸ್. ಸೋಮಶೇಖರ್, ತಹಶೀಲ್ದಾರ್ ದಯಾನಂದ್, ಗ್ರಾಪಂ ಅಧ್ಯಕ್ಷ ಸೋಮಣ್ಣ, ತಾಪಂ ಸದಸ್ಯೆ ಲಿಂಗರಾಜಮ್ಮ, ಎಪಿಎಂಸಿ ಉಪಾಧ್ಯಕ್ಷ ಸಿದ್ದರಾಜು ಇತರರು ಇದ್ದರು.