ಉಡುಪಿ: ಜಿಲ್ಲಾಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಬೆಡ್‌ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಕಂಟ್ರಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ ಹಸ್ತಾಂತರಿಸಿ ಅವರು ಮಾತನಾಡಿದರು. ಸರಕಾರ ಎಲ್ಲ ರೀತಿಯಲ್ಲಿಯೂ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಪ್ರಯತ್ನ ನಡೆಸುತ್ತಲೇ ಇದೆ.
ವೆಂಟಿಲೇಟರ್‌ಗಳನ್ನು ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಬಳಕೆ ಮಾಡಿಕೊಳ್ಳಲಾಗುವುದು ಎಂದರು.
ಉಡುಪಿಯ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಈ ಕಾರ್ಯಕ್ಕೆ ಅನುದಾನವು ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, ಮೇಲ್ದರ್ಜೆಗೇರಿಸಿ ಶೀಘ್ರದಲ್ಲಿ ಕಾರ್ಯ ಪ್ರಾರಂಭವಾಗಲಿದೆ ಎಂದರು.
ಕೊರೊನಾ ಸೋಂಕು ಇದ್ದು, ಉಸಿರಾಟದ ಸಮಸ್ಯೆ ಇರುವ ರೋಗಿಗಳಿಗೆ ಚಿಕಿತ್ಸೆ ನೀಡಿ ಅನುಕೂಲ ಮಾಡಿ ಕೊಡುವ ಉದ್ದೇಶದಿಂದ ಸರಕಾರವು 20 ಹಾಗೂ ದಾನಿಗಳಿಂದ 10 ವೆಂಟಿಲೇಟರ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡಿದೆ. ಇವುಗಳನ್ನು ಬಳಕೆ ಮಾಡಿ ಚಿಕಿತ್ಸೆ ನೀಡುವುದರಿಂದ ಮರಣವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ಕೊರೊನಾ ಸವಾಲಿನ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್‌ಗಳನ್ನು ದಾನವಾಗಿ ನೀಡಿದ ಡಾ| ಜಿ. ಶಂಕರ್, ಆಭರಣ ಜುವೆಲರ್, ರೋಬೋ ಸಾಫ್ಟ್ವೇರ್ ಟೆಕ್ನಾಲಜಿ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೆಬಲ್ ಸೊಸೈಟಿಯ ಎಚ್.ಎನ್. ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದರು.
ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.