Advertisement

MAHE ಯ ಮೊದಲ ಉಪಕುಲಪತಿ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ.ಎಂ.ಎಸ್. ವಲಿಯಥಾನ್ ನಿಧನ

10:20 AM Jul 18, 2024 | Team Udayavani |

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಡಾ. ಎಂ. ಎಸ್. ವಲಿಯಥಾನ್ ಅವರು ಬುಧವಾರ ರಾತ್ರಿ ನಿಧನ ಹೊಂದಿದರು, ಅವರಿಗೆ 90 ವರ್ಷ ವಯಸ್ಸಾಗಿತ್ತು.

Advertisement

ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್ ಸಂಸ್ಥೆಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಲಿಯಥಾನ್ ಅವರು ಇಪ್ಪತ್ತು ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸೆಯ ಪ್ರಾಧ್ಯಾಪಕರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಡಿಸ್ಪೋಸಬಲ್ ಬ್ಲಡ್ ಬ್ಯಾಗ್ ಮತ್ತು ಟಿಲ್ಟಿಂಗ್ ಡಿಸ್ಕ್ ಹೃದಯ ಕವಾಟದಂತಹ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವಲ್ಲಿ ಅವರ ನವೀನ ಕೆಲಸವು ಭಾರತದ ವೈದ್ಯಕೀಯ ಸಾಧನಗಳ ಉದ್ಯಮಕ್ಕೆ ಅಡಿಪಾಯವನ್ನು ಹಾಕಿತ್ತು

ಖ್ಯಾತ ಹೃದಯ ಶಸ್ತ್ರಚಿಕಿತ್ಸಕರೂ ಮತ್ತು ಗೌರವಾನ್ವಿತ ಶಿಕ್ಷಣ ತಜ್ಞರಾಗಿರುವ ಪ್ರೊಫೆಸರ್ ಮಾರ್ತಾಂಡ ವರ್ಮ ಶಂಕರನ್ ವಲಿಯಾಥನ್ ಅವರು 1993 ರಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಯ ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿ ಶಿಕ್ಷಣ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸುವ ಮೂಲಕ ಮಾಹೆಯ ಹೆಸರನ್ನು ಉತ್ತುಂಗಕ್ಕೆ ಏರಿಸಿದ ಗರಿಮೆ ಇವರದ್ದು.

ಅವರ ನಾಯಕತ್ವದಲ್ಲಿ, ಮಾಹೆಯು ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಇನ್ನಷ್ಟು ವಿಸ್ತರಿಸಿತು. ಉನ್ನತ ಶಿಕ್ಷಣದಲ್ಲಿ ಮತ್ತು ಸಂಶೋಧನಾ ವಲಯದಲ್ಲಿ ಗಣನೀಯವಾಗಿ ಸಾಧನೆ ಮಾಡಲು ನಾಂದಿಯಾಯಿತು. ಸಂಸ್ಥೆಯ ಜಾಗತಿಕ ಖ್ಯಾತಿಯನ್ನು ಹೆಚ್ಚಿಸುವ ಮೂಲಕ ಅಂತರಶಿಸ್ತೀಯ ಸಹಯೋಗ ಮತ್ತು ಅಂತರಾಷ್ಟ್ರೀಯ ಸಹಭಾಗಿತ್ವವನ್ನು ಪ್ರೋತ್ಸಾಹಿಸುವ ಪರಿಸರವನ್ನು ಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಾಹೆ ಮಣಿಪಾಲವನ್ನು ವಿಶ್ವದರ್ಜೆಯ ವಿಶ್ವವಿದ್ಯಾನಿಲಯವನ್ನಾಗಿ ಪರಿವರ್ತಿಸುವಲ್ಲಿ, ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಆಕರ್ಷಿಸುವಲ್ಲಿ ಮತ್ತು ಭಾರತ ಮತ್ತು ವಿಶ್ವಾದ್ಯಂತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸುವಲ್ಲಿ ಅವರ ದೃಷ್ಟಿ ಮತ್ತು ಸಮರ್ಪಣೆ ಪ್ರಮುಖವಾಗಿದೆ.

ಪದ್ಮವಿಭೂಷಣ, ಪದ್ಮಶ್ರೀ ಪ್ರಶಸ್ತಿ:
ಪ್ರೊಫೆಸರ್ ವಲಿಯಾಥನ್ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಕೊಂಡಿದ್ದಾರೆ ಅದರಲ್ಲಿ ಪದ್ಮವಿಭೂಷಣ (2005), ಪದ್ಮಶ್ರೀ (2002), ಡಾ. ಬಿ. ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ, ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನ ಹಂಟೇರಿಯನ್ ಪ್ರೊಫೆಸರ್‌ಶಿಪ್, ಚೆವಲಿಯರ್ ಆಫ್ ದಿ ಆರ್ಡರ್ ಆಫ್ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದರು.

Advertisement

ಫ್ರೆಂಚ್ ಸರ್ಕಾರದಿಂದ ಪಾಮ್ಸ್ ಅಕಾಡೆಮಿಕ್ಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದಿಂದ ಅಂತರರಾಷ್ಟ್ರೀಯ ವೈದ್ಯಕೀಯ ಶಿಕ್ಷಣಕ್ಕಾಗಿ ಡಾ. ಸ್ಯಾಮ್ಯುಯೆಲ್ ಪಿ. ಆಸ್ಪರ್ ಪ್ರಶಸ್ತಿ ಮತ್ತು ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ವಲಿಯಾಥನ್ ಅವರ ನಿಧನಕ್ಕೆ ಮಾಹೆ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.

ಇದನ್ನೂ ಓದಿ: Shivamogga: ರೈಲ್ವೆ ಹಳಿಗಳ ಮೇಲೆ ಬಿದ್ದ ಬೃಹತ್ ಮರ; ರೈಲು ಸಂಚಾರದಲ್ಲಿ ವ್ಯತ್ಯಯ

 

Advertisement

Udayavani is now on Telegram. Click here to join our channel and stay updated with the latest news.

Next