ಬೆಂಗಳೂರು: ಹಿರಿಯ ವೈಚಾರಿಕ ಬರಹಗಾರರು ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಾ. ಕೋ. ಚೆನ್ನಬಸಪ್ಪ ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು ಮತ್ತು ಚೆನ್ನಬಸಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಕರ್ನಾಟಕ ಏಕಿಕರಣ ಹೋರಾಟದ ಸಂದರ್ಭದಲ್ಲಿ ಕೋ.ಚೆನ್ನಬಸಪ್ಪ ಅವರು ಮುಂಚೂಣಿಯಲ್ಲಿ ಇದ್ದರು. ಹಲವಾರು ಮೌಲ್ಯಾಧಾರಿತ ಚೆನ್ನಬಸಪ್ಪನವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಬಿಜಾಪುರದಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಹಂಪಿ ವಿ.ವಿ.ಯ ನಾಡೋಜ, ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರಿನಲ್ಲಿ ಹುಟ್ಟಿದ ಚೆನ್ನಬಸಪ್ಪನವರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ ಸೆರೆವಾಸವನ್ನೂ ಅನುಭವಿಸಿದ್ದರು. ಸೆರೆಯಿಂದ ಬಿಡುಗಡೆಗೊಂಡ ಬಳಿಕ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿದ್ದರು ಹಾಗೂ ಬೆಳಗಾವಿ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣವನ್ನು ಪಡೆದುಕೊಂಡಿದ್ದರು. ಮಾತ್ರವಲ್ಲದೆ ಚೆನ್ನಬಸಪ್ಪನವರು ಚರಿತ್ರೆ ಮತ್ತು ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಸಹ ಪಡೆದುಕೊಂಡಿದ್ದರು.
ಕನ್ನಡ ಸಾರಸ್ವತ ಲೋಕದ ಮಹಾನ್ ಪ್ರತಿಭೆ ಕೋ. ಚೆನ್ನಬಸಪ್ಪನವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವುಂಟಾಗಿದೆ. ಶ್ರೀಯುತರ ಆತ್ಮಕ್ಕೆ ಭಗವಂತ ಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ನಾಡೋಜ ಮನು ಬಳಿಗಾರ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.