Advertisement

ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌

11:11 PM Mar 16, 2020 | Lakshmi GovindaRaj |

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶಗಳನ್ನು ಜಿಲ್ಲಾಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದರು.

Advertisement

ಕಾನ್ಫರೆನ್ಸ್‌ ಮೂಲಕ ಮಂಡ್ಯ, ಮೈಸೂರು, ವಿಜಯಪುರ, ಬಳ್ಳಾರಿ, ಕೊಪ್ಪಳ, ಕೊಡಗು ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ ಮಾಡಿ, ಅಲ್ಲಿನ ಹೋಮ್‌ ಸ್ಟೇಗಳ ಬಗ್ಗೆ ವಿಶೇಷ ನಿಗಾ ವಹಿಸಲು ಸೂಚಿಸಲಾಯಿತು. ಪ್ರತಿ ದಿನ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್‌ ಸಭೆ ನಡೆಸಿ ಜಿಲ್ಲೆಯಲ್ಲಿನ ಪರಿಸ್ಥಿತಿ ಅವಲೋಕಿಸಬೇಕು. ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆಯಬೇಕು ಎಂದು ತಿಳಿಸಲಾಗಿದೆ.

ರಾಜ್ಯದ ಗಡಿ ಭಾಗಗಳಲ್ಲಿ ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಸಹಾಯಕೇಂದ್ರ ಸ್ಥಾಪನೆ, ಚೆಕ್‌ಪೋಸ್ಟ್‌ ಪ್ರಯಾಣಿಕರ ಸ್ಕ್ರಿನಿಂಗ್‌ ಕ್ರಮ ವಹಿಸಬೇಕು. ದೊಡ್ಡ ಪ್ರಮಾಣದಲ್ಲಿ ದೇವಸ್ಥಾನಗಳಿಗೆ ಜನರು ಭೇಟಿ ನೀಡುವ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಸರ್ಕಾರ ಹೊರಡಿಸಿರುವ ಮಾರ್ಗಸೂಚಿ, ಆದೇಶಗಳನ್ನು ನಿಗದಿತ ಅವಧಿಯವರೆಗೆ ಕಟ್ಟುನಿಟ್ಟಾಗಿ ಜಾರಿಯಾಗಿರುವ ಬಗ್ಗೆ ಸೂಕ್ತ ಮೇಲ್ವಿಚಾರಣೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹೇಳಲಾಗಿದೆ.

ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌, ಆರೋಗ್ಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next