ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಮತ್ತು ರಾಜ್ಯಸಭೆ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.
ಮಲ್ಲೇಶ್ವರಂನ ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ನಾಲ್ಕು ಸ್ಥಾನಗಳ ಪೈಕಿ ಒಂದಕ್ಕೆ ವಿಜಯೇಂದ್ರ ಹೆಸರು ಅಂತಿಮವಾಗಿದೆ. ಉಳಿದ ಮೂರು ಸ್ಥಾನಗಳಿಗೆ 15 ಹೆಸರು ಶಿಫಾರಸು ಮಾಡಲು ತೀರ್ಮಾನ ಮಾಡಲಾಗಿದೆ. ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ್ ಸುರಾನ, ಸಿದ್ದರಾಜು, ರಾಜೇಂದ್ರ, ಮಹೇಶ್ ತೆಂಗಿನಕಾಯಿ ಹೆಸರನ್ನು ಪರಿಷತ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.
ರಾಜ್ಯಸಭೆಯ ಎರಡು ಸ್ಥಾನದಲ್ಲಿ ಒಂದು ಸ್ಥಾನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮಗೊಳಿಸಲಾಗಿದೆ. ಉಳಿದ ಒಂದು ಸ್ಥಾನಕ್ಕೆ ಕೆ.ಸಿ.ರಾಮಮೂರ್ತಿ ಸೇರಿ ಐವರ ಹೆಸರು ಶಿಫಾರಸು ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದನ್ನೂ ಓದಿ:ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ ನಿರ್ಧಾರ: ಅರುಣ್ ಸಿಂಗ್
ವಿಧಾನ ಪರಿಷತ್ ಸದಸ್ಯರಾದ ನಂತರ ವಿಜಯೇಂದ್ರಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಅಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೊಸ್ ಪ್ರಯಾಣ ನಂತರ ಸಂಪುಟ ಪುನಾರಚನೆ ನಡೆಸಲಾಗುವುದು ಎನ್ನಲಾಗಿದೆ. ಸಿಎಂ ಬೊಮ್ಮಾಯಿ ಮೇ.21ರ ರಾತ್ರಿ ದಾವೋಸ್ ಗೆ ತೆರಳಲಿದ್ದು, ಮೇ.26ರಂದು ಬೆಂಗಳೂರಿಗೆ ಮರಳಲಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂತಾದವರು ಭಾಗವಹಿಸಿದ್ದರು.