ಮೈಸೂರು: ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸಮಾರಂಭವನ್ನು ಬುಧವಾರ ಆಚರಿಸಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಮಾಜಿ ಶಾಸಕ ವಾಸು ತಿಳಿಸಿದರು.
ಬುಧವಾರ ಬೆಳಗ್ಗೆ 10ಗಂಟೆಗೆ ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಬನ್ನೂರು ರಸ್ತೆಯಲ್ಲಿರುವ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಜತ ಮಹೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಸಭಾಂಗಣವನ್ನು ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಅತಿಥಿಗಳಾಗಿ ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್, ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್‌ಸೇಠ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ ಭಾಗವಹಿಸಲಿದ್ದಾರೆ. ಇದೇ ವೇಳೆ ಮಂಡ್ಯದ ಪಿಇಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಎಚ್.ಡಿ.ಚೌಡಯ್ಯ, ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸಂಸ್ಥೆಯ ಡಾ.ಕೆ.ವಿ.ಚಿದಾನಂದ ಅವರನ್ನು ಸನ್ಮಾನಿಸಲಾಗುವುದು ಎಂದರು.
ಸಂಜೆ 5.30ಕ್ಕೆ ಆದಿಚುಂಚನಗಿರಿ ಕ್ಷೇತ್ರದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ರಜತ ಮಹೋತ್ಸವದ ಸಮಾರೋಪ ನಡೆಯಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಸದ ಆರ್.ಧ್ರುವನಾರಾಯಣ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್, ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಆರ್.ಧರ್ಮಸೇನಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.
1991ರಲ್ಲಿ ಸ್ಥಾಪಿತವಾದ ವಿದ್ಯಾವಿಕಾಸ ಶಿಕ್ಷಣಸಂಸ್ಥೆ ಮೊದಲಿಗೆ ಬೆಂಗಳೂರು ಹಾಗೂ ಮೈಸೂರು ನಗರಗಳಲ್ಲಿ ಪಾಲಿಟೆಕ್ನಿಕ್ ಆರಂಭಿಸಿ, ನಂತರದಲ್ಲಿ ನರ್ಸರಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಹೋಟೆಲ್ ಮ್ಯಾನೇಜ್‌ಮೆಂಟ್,
ಬಿ.ಇಡಿ, ಕಂಪ್ಯೂಟರ್ ಅಪ್ಲಿಕೇಷನ್,ಎಂಬಿಎ, ಎಂಎಸ್‌ಡಬ್ಲೂ, ಕಾನೂನು ಪದವಿ ಸೇರಿದಂತೆ 18 ಸಂಸ್ಥೆಗಳಲ್ಲಿ 87 ಕೋರ್ಸ್‌ಗಳನ್ನು ನಡೆಸುತ್ತಿದ್ದು, 300ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ಕವೀಶ್‌ಗೌಡ ತಿಳಿಸಿದರು.