ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಿಲ್ಲಾ ಬಂದ್ ಗೆ ಕರೆ ನೀಡಿವೆ. ನಗರದಲ್ಲಿ ಸಾರಿಗೆ ಬಸ್ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ.
ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅಹಿಂದ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಅಂಬೇಡ್ಕರ್ ವಿಚಾರವಾದಿಗಳ ಬಳಗದ ನೇತೃತ್ವದಲ್ಲಿ ಜಿಲ್ಲಾ ಬಂದ್ ಆಚರಿಸಲಾಗುತ್ತಿದೆ.
ಕಾರ್ಮಿಕ, ರೈತ, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಹಿನ್ನೆಲೆಯಲ್ಲಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಇಂದು ದಿನ ರಜೆ ಘೋಷಿಸಲಾಗಿದೆ. ಅಲ್ಲದೇ, ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.
ಕೇಂದ್ರ ಬಸ್ ನಿಲ್ದಾಣದಿಂದ ಬೆಳಗ್ಗೆಯಿಂದಲೇ ಬಸ್ ಸ್ಥಗಿತಗೊಂಡಿದೆ. ಬೈಪಾಸ್, ರಿಂಗ್ ರಸ್ತೆಗಳ ಮೂಲಕ ಕೆಲ ಬಸ್ ಸಂಚಾರ ಇದೆ. ಆಟೋಗಳು ಹಾಗೂ ಬೈಕ್ ಓಡಾಟವು ವಿರಳವಾಗಿದೆ.
ಮಾರುಕಟ್ಟೆ ಪ್ರದೇಶದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗದೆ. ರಸ್ತೆ ಬದಿಯಲ್ಲಿ ಹೂ, ಹಣ್ಣು ಮಾರಾಟಕ್ಕೆ ಇದುವರೆಗೂ ಯಾವುದೇ ತೊಂದರೆಯಾಗಿಲ್ಲ. ಬಂದ್ ಪ್ರಯುಕ್ತ ಸಂಟಘಕರು ಸಿದ್ದೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಈಗಾಗಲೇ ಸಿದ್ಧತೆ ನಡೆಸಿದ್ದು, ಬೇರೆ ಬೇರೆ ಭಾಗಗಳಿಂದ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬಂದು ಸೇರುತ್ತಿದ್ದಾರೆ.
ಇದನ್ನೂ ಓದಿ: BPSC ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ, ಲಾಠಿ ಚಾರ್ಜ್, ಪ್ರಶಾಂತ್ ಕಿಶೋರ್ ವಿರುದ್ಧ FIR