ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 22 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾನೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಇದೇ ದಿನ 22 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 616ಕ್ಕೆ ಏರಿಕೆಯಾಗಿದೆ.
ಮಂಗಳವಾರ ಸಂಜೆ ಬಿಡುಗಡೆ ಆಗಿರುವ ವೈದ್ಯಕೀಯ ವರದಿ ಪ್ರಕಾರ 35 ವರ್ಷದ ಸೋಂಕಿತ ಪಿ-16985 ರೋಗಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ನಗರದ ಬಸವ ನಗರ ನಿವಾಸಿಯಾಗಿದ್ದ ಮೃತ ಸೋಂಕಿತ ಜೂನ್ 23ರಂದು ಜ್ವರ, ನೆಗಡಿ, ಕೆಮ್ಮು ಲಕ್ಷಣಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗಂಟಲು ದ್ರವ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು.
ಜು.6ರಂದು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಸೋಂಕಿತನ ಶವಸಂಸ್ಕಾರ ಸರ್ಕಾರದ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ವಿವರಿಸಿದ್ದಾರೆ.
ಜಿಲ್ಲೆಯಲ್ಲಿ ಮತ್ತೆ 22 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 616ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 442 ಜನರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 163 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.