ವಿಜಯಪುರ: ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಡೆಂಘೀ ಜ್ವರ ಹತೋಟಿಗೆ ಅವಶ್ಯಕ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವಿಕಾಸ ಸುರಳಕರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಡೆಂಘೀ ಜ್ವರ ನಿಯಂತ್ರಣ ಕುರಿತ ಜಿಲ್ಲಾಮಟ್ಟದ ಅಂತರ್ ಇಲಾಖೆಗಳ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮುಂಬರುವ ಮಳೆಗಾಲದಲ್ಲಿ ಡೆಂಘೀ ಜ್ವರ ಹತೋಟಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ರೋಗಕಾರಕ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಜೊತೆಗೆ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಬಂಧಪಟ್ಟ ಇಲಾಖೆಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಡೆಂಘೀ ಜ್ವರ ನಿಯಂತ್ರಣಕ್ಕೆ ನಿರ್ಲಕ್ಷ್ಯ ವಹಿಸದೇ ಅಗತ್ಯ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಡೆಂಘೀ ರೋಗಿಗಳ ಪ್ರಮಾಣ ತಗ್ಗಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದ ಅವರು, ನಿರ್ಲಕ್ಷ್ಯ ತೋರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಜಿಲ್ಲೆಯ ನೀರು ನಿಲ್ಲುವಂತಹ ಸ್ಥಳಗಳಲ್ಲಿ ಕ್ಲೋರಿನೇಶನ್ ಹಾಗೂ ಫಾಗಿಂಗ್ ಮಾಡಬೇಕು. ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ವಹಿಸದಂತೆ ತಿಳಿಸಿದ ಅವರು, ಡೆಂಘೀ ಜ್ವರಕ್ಕೆ ಕಾರಣವಾಗುವ ಸೊಳ್ಳೆಗಳ ನಿಯಂತ್ರಣಕ್ಕೆ ಹೆಚ್ಚೆಚ್ಚು ಲಾರ್ವಾ ಮೀನು ಮರಿಗಳ ಬಳಕೆಗೆ ಸೂಚನೆ ನೀಡಿ, ಹೆಚ್ಚು ನೀರು ಸಂಗ್ರಹವಾಗುವ ಸ್ಥಳಗಳನ್ನು ಗುರುತಿಸುವ ಜೊತೆಗೆ ನೀರು ಮಲೀನವಾಗುವ ಸ್ಥಳಗಳಲ್ಲಿ ಅವಶ್ಯಕ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ವೈದ್ಯಕೀಯ ಘನತ್ಯಾಜ್ಯ ನಿರ್ವಹಣೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ವೈದ್ಯಕೀಯ ಘನತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ವೈದ್ಯಕೀಯ ಘನತ್ಯಾಜ್ಯ ನಿರ್ವಹಣೆಗಾಗಿ ಪರಸ್ಪರ ಸಮನ್ವಯತೆ ಹಾಗೂ ಸಂವಹನದ ಅವಶ್ಯಕತೆ ಇದೆ. ಇದರ ವಿಲೇವಾರಿಗೆ ಆಯಾ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಂಸ್ಥೆಗಳು ಸಮನ್ವಯತೆ ಸಾಧಿಸಿ ವ್ಯವಸ್ಥಿತವಾಗಿ ಘನತ್ಯಾಜ್ಯ ವಿಲೇವಾರಿಗೆ ಕ್ರಮ ಜರುಗಿಸಬೇಕು. ಸಕಾಲಕ್ಕೆ ಸಂಬಂಧಪಟ್ಟ ಸಂಸ್ಥೆಗೆ ಇದಕ್ಕೆ ಸಂಬಂಧಿಸಿದ ಬಿಲ್ ಸಂದಾಯವಾಗುವಂತೆ ನೋಡಿಕೊಳ್ಳುವಂತೆಯೂ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಡಿಎಚ್ಒ ಡಾ| ಮಹೇಂದ್ರ ಕಾಪ್ಸೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶರಣಪ್ಪ ಕಟ್ಟಿ, ಆರ್‌ಸಿಎಚ್ ಅಧಿಕಾರಿ ಡಾ| ಚವ್ಹಾಣ, ಕುಟುಂಬ ಕಲ್ಯಾಣ ಅಧಿಕಾರಿ ಡಾ| ಜ್ಯೋತಿ ಪಾಟೀಲ, ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಲ್ಲನಗೌಡ ಬಿರಾದಾರ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಗುಣಾರಿ ಇದ್ದರು.