ವಿಜಯಪುರ: ಜಿಲ್ಲಾದ್ಯಂತ ಜೂ.22ರಿಂದ ಮೂರು ದಿನಗಳ ಕಾಲ 4 ಪರೀಕ್ಷಾ ಕೇಂದ್ರಗಳಲ್ಲಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಜೂ.22ರಿಂದ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ 4,110 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದು, ನಗರದ ಬಾಲಕರ ಪದವಿ ಪೂರ್ವ ಕಾಲೇಜ್, ಪಿಡಿಜೆ ಪದವಿ ಪೂರ್ವ ಕಾಲೇಜ್, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಬಂಜಾರಾ ಪದವಿ ಪೂರ್ವ ಕಾಲೇಜ್ ಸೇರಿದಂತೆ ಈ ನಾಲ್ಕು ಕಡೆಗಳಲ್ಲಿ 4 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಪರೀಕ್ಷೆ ಸುಗಮವಾಗಿ ನಡೆಯಲು ಯಾವುದೇ ರೀತಿಯ ನಕಲುದಂತಹ ಅಕ್ರಮ ಚಟುವಟಿಕೆಗಳನ್ನು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೊಠಡಿ ಮೇಲ್ವಿಚಾರಕರು ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲೂ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸುತ್ತಿದ್ದು, ಪರೀಕ್ಷಾ ಕೇಂದ್ರದ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಯಾವುದೇ ರೀತಿಯ ಝರಾಕ್ಸ್ ಅಂಗಡಿಗಳನ್ನು ತೆರೆಯಬಾರದು. ಅದರಂತೆ ಪರೀಕ್ಷಾ ಕೇಂದ್ರದೊಳಗೆ ಅಧಿಕೃತ ಸಿಬ್ಬಂದಿ ಹೊರತುಪಡಿಸಿ ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಇಲೆಕ್ಟ್ರಾನಿಕ್ ಸಾಧನ, ಪರಿಕರಗಳನ್ನು ತೆಗೆದುಕೊಂಡು ಹೋಗುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಪರೀಕ್ಷಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಿ -ಸಿಬ್ಬಂದಿಗಳು ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ತೋರದೆ ಪರೀಕ್ಷೆಗಳು ಅತ್ಯಂತ ಪಾರದರ್ಶಕ, ಶಾಂತಿಯುತ ಹಾಗೂ ನಕಲುಮುಕ್ತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೂ ಯಾವುದೇ ರೀತಿಯ ಅನಾನೂಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಉಪ ಮುಖ್ಯ ಅಧೀಕ್ಷಕರು ಪರೀಕ್ಷೆಯ ಪೂರ್ಣ ಜವಾಬ್ದಾರರಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಅವರು ಸೂಚಿಸಿದರು.
ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಜೆ.ಎಸ್. ಪೂಜಾರಿ ಪರೀಕ್ಷಾ ಸಿದ್ಧತೆ ಕುರಿತು ಮಾಹಿತಿ ನೀಡಿದರು.