ವಿಜಯಪುರ: ಜಿಲ್ಲೆಯಲ್ಲಿ ಕುಷ್ಠರೋಗ ಹರಡುವ ಸೂಕ್ಷ್ಮ ಸ್ಥಳಗಳ ಬಗ್ಗೆ ನಿಗಾ ಇಡುವ ಜೊತೆಗೆ ಸಂಶಯಾಸ್ಪದ ರೋಗಿಗಳನ್ನು ಗುರುತಿಸಿ ಸೂಕ್ತ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬುಧವಾರ ನರಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ಕುಷ್ಠರೋಗ ಹರಡುವ ಸೂಕ್ಷ್ಮ ಸ್ಥಳಗಳ ಬಗ್ಗೆ ನಿಗಾ ಇಡಬೇಕು. ಕುಷ್ಠರೋಗ ಖಾತ್ರಿ ಪಡಿಸಿದ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸುವುದರ ಜೊತೆಗೆ ಈ ರೋಗದ ಲಕ್ಷಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕುಷ್ಠರೋಗ ನಿರ್ಮೂಲನೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಸ್ತಾವಿಕ ಮಾತನಾಡಿದ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಸಂಪತಕುಮಾರ ಗುಣಾರೆ, ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು, ತ್ವಚೆ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು ಕುಷ್ಠ ರೋಗದ ಲಕ್ಷಣಗಳಾಗಿವೆ. ಲೆಪ್ರಾ ಪ್ರತಿಕ್ರಿಯೆ ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ನಿರ್ಮೂಲನೆಗೆ ಜಿಲ್ಲಾಡಳಿತ ಅನೇಕ ಕಾರ್ಯಕ್ರಮ ಕೈಗೊಂಡಿದೆ. ವ್ಯಕ್ತಿ ದೇಹದ ಮೇಲೆ ಯಾವುದೆ ಬಾಗದಲ್ಲಿ ತಿಳಿ-ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಆರೋಗ್ಯ ಸಹಾಯಕ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಸ್ಥಳಿಯ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.
ಕುಷ್ಠರೋಗವು ಸಂಪೂರ್ಣ ಗುಣಮುಖ ಹೊಂದುವ ಕಾಯಿಲೆಯಾಗಿದ್ದು, ಬಹುವಿಧ ಔಷ ಧ ಚಿಕಿತ್ಸೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಕುಷ್ಠರೋಗಕ್ಕೆ ಅಂಡಿಕೊಂಡಿರುವ ಕಳಂಕ ಹಾಗೂ ತಾರತಮ್ಯ ಹೋಗಲಾಡಿಸಿ ಕುಷ್ಠರೋಗಿಗಳಿಗೆ ಗೌರವಯುತವಾಗಿ ಬದುಕಲು ಅವಕಾಶ ನೀಡೋಣ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಮಹೇಂದ್ರ ಕಾಪ್ಸೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.