ವಿಜಯಪುರ: ಜಿಲ್ಲೆಯ ಕೃಷ್ಣಾ ಹಾಗೂ ಭೀಮಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆ ತೀವ್ರ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಸಂವಾದದಲ್ಲಿ ತಾಲೂಕು ಮಟ್ಟದ ಕಂದಾಯ, ಪೊಲೀಸ್, ಗಣಿ ಮತ್ತು ಭೂವಿಜ್ಞಾನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದ ಅವರು, ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ತಾಲೂಕು ಕಾರ್ಯಪಡೆ ಸಮಿತಿ ಇನ್ನೂ ಚುರುಕಾಗಿ ಕಾರ್ಯನಿರ್ವಹಿಸಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಭೀಮಾ ನದಿ ಪಾತ್ರದ ಇಂಡಿ, ಮೊರಟಗಿ ಚೆಕ್‌ಪೋಸ್ಟ್ ವ್ಯಾಪ್ತಿಯಲ್ಲಿ ತೀವ್ರ ನಿಗಾ ಇಡಬೇಕು. ಭೀಮಾ ನದಿ ತೀರದ ಇಂಡಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಾಗಿ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ವಿಶೇಷವಾದ ಇಬ್ಬರು ಅಧಿಕಾರಿಗಳನ್ನು 24×7 ಕಾಲ ನಿಯೋಜಿಸಿ, ತೀವ್ರ ನಿಗಾ ಇಡುವಂತೆ ಸೂಚಿಸಿದರು.
ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್ಫೋರ್ಸ್ ಸಮಿತಿಯಲ್ಲಿರುವ ಪೊಲೀಸ್ ಉಪ ಅಧೀಕ್ಷಕರು, ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಸಮಿತಿ ಚುರುಕಾಗಿ ಕೆಲಸ ಮಾಡಬೇಕು. ಅಕ್ರಮ ಮರಳು ಗಣಿಗಾರಿಕೆ ಕುರಿತು ಬರುವ ದೂರುಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅವಶ್ಯಕ ಸಂದರ್ಭದಲ್ಲಿ ಪೊಲೀಸ್ ಇಲಾಖೆ ನೆರವು ಪಡೆಯುವಂತೆ ನಿರ್ದೇಶನ ನೀಡಿದರು.
ತಾಲೂಕು ಟಾಸ್ಕ್ಫೋರ್ಸ್ ಸಮಿತಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ನೇಮಿಸಬೇಕು. ದೂರುಗಳು ಬಂದ ತಕ್ಷಣ ವಿಳಂಬ ಮಾಡದೇ ತಕ್ಷಣ ಕ್ರಮ ಕೈಗೊಳ್ಳಬೇಕು. ತಾಳಿಕೋಟೆಯಲ್ಲಿ ತಹಶೀಲ್ದಾರರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ನಿರ್ಲಕ್ಷ ಮತ್ತು ಸಮನ್ವಯತೆ ಕೊರತೆಯಿಂದ ಲೋಪವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ನೂತನ ಮರಳು ನೀತಿ ಅನ್ವಯ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಿ, ವಿಜಯಪುರ ಕೃಷ್ಣಾ ನದಿ ತೀರದ ವ್ಯಾಪ್ತಿಯಲ್ಲಿಯೂ ತೀವ್ರ ನಿಗಾ ಇಡುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ವಿಶೇಷವಾಗಿ ಬಬಲೇಶ್ವರ ತಹಶೀಲ್ದಾರರು ಹಾಗೂ ಆಡಳಿತದ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಲೋಪಕ್ಕೆ ಅವಕಾಶ ನೀಡದಂತೆ ಅವರು ಸೂಚನೆ ನೀಡಿದರು.
ಎಸ್ಪಿ ಅನುಪಮ್ ಅಗರವಾಲ್ ಅವರು ಅಕ್ರಮ ಗಣಿಗಾರಿಕೆ ತಡೆಗೆ ತಾಲೂಕಾವಾರು ಸಹಾಯವಾಣಿ ಮತ್ತು ವಿಚಕ್ಷಣಾ ತಂಡಗಳ ರಚನೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವ ಕುರಿತಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಜಿಪಂ ಸಿಇಒ ಗೋವಿಂದರೆಡ್ಡಿ ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಪೊಲೀಸ್, ಲೋಕೋಪಯೋಗಿ, ಕಂದಾಯ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.