Advertisement

ಗುಣಮಟ್ಟ ಶಿಕ್ಷಣಕ್ಕೆ ಡಿಸಿ ಸೂಚನೆ

03:52 PM Nov 23, 2019 | |

ವಿಜಯಪುರ: ಪ್ರಧಾನಮಂತ್ರಿಗಳ ಹೊಸ 15 ಕಾರ್ಯಕ್ರಮಗಳ ಅಡಿಯಲ್ಲಿ ಅಲ್ಪಸಂಖ್ಯಾತರ ಜನಾಂಗದವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದ್ದಾರೆ. ಶುಕ್ರವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

Advertisement

ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಗುಣಮಟ್ಟದಲ್ಲಿ ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದ ಅವರು, ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಸಂಬಂಧಪಟ್ಟಂತೆ ಅವಶ್ಯಕವಿರುವ ಅನುದಾನ ಹಾಗೂ ಇತರೆ ಶಾಲಾ ಕೊಠಡಿಗಳ ಪ್ರಸ್ತಾವನೆ ನೀಡುವಂತೆ ತಿಳಿಸಿ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಅದರಂತೆ ಸರ್ಕಾರಿ ಉರ್ದು ಶಾಲೆಗಳು ಮತ್ತು ಮದರಸಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಅನುದಾನ ಬಳಕೆಯಾಗಬೇಕು. ಮದರಸಾ ಶಿಕ್ಷಣ ಸಂಸ್ಥೆಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಅನುದಾನ ಸಮರ್ಪಕವಾಗಿ ಬಳಸುವಂತೆ ಸೂಚಿಸಿದ ಅವರು, ಅನುದಾನ ಲ್ಯಾಪ್ಸ್‌ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.

ಜಿಲ್ಲೆಯ ವಿವಿಧ ಮದರಸಾ, ಅರೆಬಿಕ್‌ ಶಾಲೆ ಹಾಗೂ ಉರ್ದು ಶಾಲೆಗಳಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣದ ಬಗ್ಗೆ ಪರಿಶೀಲಿಸಿದ ಅವರು, ಮಕ್ಕಳ ದಾಖಲಾತಿ ಹೆಚ್ಚಿಸಲು ಹಾಗೂ ಶಿಕ್ಷಕರಿಗೆ ಪಾಠ ಬೋಧನೆ ಅನುಕೂಲಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ವ್ಯವಸ್ಥೆ ಬಗ್ಗೆ ಖುದ್ದಾಗಿ ಪರಿಶೀಲಿಸುವುದಾಗಿ ತಿಳಿಸಿದರು.

ಜಿಲ್ಲೆಯಾದ್ಯಂತ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ, ಶಿಕ್ಷಕರ ಕೊರತೆ, ವಿದ್ಯಾರ್ಥಿಗಳ ಸಂಖ್ಯೆ, ಹೊಸ ಕೊಠಡಿಗಳ ಅವಶ್ಯಕತೆ ಕುರಿತ ಮಾಹಿತಿಯನ್ನು ಸಮಗ್ರ ರೀತಿಯಲ್ಲಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕ ರೀತಿಯಲ್ಲಿ ನಡೆಸಬೇಕು. ಜಿಲ್ಲಾಧಿಕಾರಿಗಳ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿರುವ ಸಮಿತಿಗಳಲ್ಲಿ ಫಲಾನುಭವಿಗಳ ಆಯ್ಕೆ ಹಾಗೂ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿರುವ ಸಮಿತಿಗಳಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು. ವಿವಿಧ ಯೋಜನೆಗಳ ಕುರಿತು ಜಾಗೃತಿ ಶಿಬಿರಗಳನ್ನು ಆಯೋಜಿಸುವಂತೆ ಸೂಚಿಸಿದರು.

ಜಿಲ್ಲೆಯ ವಿವಿಧ ತಾಲೂಕು, ವಿಶೇಷವಾಗಿ ಸಿಂದಗಿ ತಾಲೂಕಿನಲ್ಲಿ ತಪ್ಪದೇ ಗ್ರಾಮ ಸಭೆಗಳನ್ನು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಸಿಇಒ ಗೋವಿಂದ ರೆಡ್ಡಿ ಮಾತನಾಡಿ, ಅಲ್ಪಸಂಖ್ಯಾತರ ಶಾಲೆಗಳ, ಉರ್ದು ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲವಾಗಲು ವಿದ್ಯಾರ್ಥಿಗಳೂ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಮ್ಮ ಹೆಸರು ನೋಂದಣಿ ಕುರಿತು ಅರಿವು ಮೂಡಿಸಬೇಕು. ಮೆಟ್ರಿಕ್‌ ನಂತರದ ವಸತಿ ನಿಲಯಗಳ ವಿದ್ಯಾರ್ಥಿಗಳಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಜಯಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳ ಕೊಳಗೇರಿ ಪ್ರದೇಶಗಳಲ್ಲಿ ಅಂತಿಮವಾಗಿ ಆಯ್ಕೆಯಾಗಿರುವ ಫಲಾನುಭವಿಗಳ ಆಯ್ಕೆಪಟ್ಟಿ ಸಲ್ಲಿಸಬೇಕು. ವಿವಿಧ ಸಾಲ-ಸೌಲಭ್ಯಗಳನ್ನು ಸಕಾಲಕ್ಕೆ ದೊರಕಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ವಸಹಾಯ ಸಂಘಗಳಿಗೆ ಸುತ್ತುನಿಧಿ  ಬಿಡುಗಡೆ, ಸ್ವಯಂ ಉದ್ಯೋಗ, ಶ್ರಮಶಕ್ತಿ ಸಾಲ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ ಲೋಕರೆ ಸ್ವಾಗತಿಸಿದರು. ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನ ಪರಿಶೀಲನಾ ಸಮಿತಿ ಸದಸ್ಯ ಸುಲೇಮಾನ ಉಮರ್‌ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next