ಹಾವೇರಿ: ಮುಖ್ಯಮಂತ್ರಿಯವರ ಗ್ರಾಮ ವಾಸ್ತವ್ಯ, ಸಚಿವರ ಗ್ರಾಮ ವಾಸ್ತವ್ಯ ಮುಂದುವರಿದು ಕೆಲವು ಕಡೆಗಳಲ್ಲಿ ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡಿ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಿದ್ದನ್ನು ನಾವು ಕೇಳಿದ್ದೇವೆ. ಈಗ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳೇ ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆಗೆ ಸ್ಪಂದಿಸಲು ಮುಂದಾಗಿದ್ದಾರೆ!
ಹೌದು, ಇಂಥದೊಂದು ನೂತನ ಕಾರ್ಯಕ್ರಮಕ್ಕೆ ಇಲ್ಲಿಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಮುಂದಾಗಿದ್ದಾರೆ. ತಾಲೂಕು ಮಟ್ಟದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ ಜನರಿಗೆ ಸೌಲಭ್ಯ ಕಲ್ಪಿಸಲು ಜಿಪಂ ಸಿಇಒ ರಮೇಶ ದೇಸಾಯಿ ಈ ಹೊಸ ಹೆಜ್ಜೆ ಇಟ್ಟಿದ್ದಾರೆ. ಪ್ರತಿ ತಿಂಗಳಿಗೊಮ್ಮೆ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸ್ವಚ್ಛ ಭಾರತ ಮಿಷನ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಜನರ ಸಹಕಾರ ಹಾಗೂ ಅವರ ಪಾಲುದಾರಿಕೆ ಹೆಚ್ಚಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಂಗಳಿಗೆ ಕನಿಷ್ಟ ಒಂದು ದಿನ ಗ್ರಾಮ ವಾಸ್ತವ್ಯ ಏರ್ಪಡಿಸಲು ಸೂಚಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿ ತಿಂಗಳಿನ ಗ್ರಾಮ ವಾಸ್ತವ್ಯದ ಬಗ್ಗೆ ದಿನಚರಿ ಪುಸ್ತಕದಲ್ಲಿ ನಮೂದಿಸಿಕೊಳ್ಳಬೇಕು. ಆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿ ಸಿದ ಕಾರ್ಯಕ್ರಮಗಳಾದ ಮನೆ ಭೇಟಿ, ಗುಂಪು ಚರ್ಚೆ, ಪರಿಣಿತರಿಂದ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಗ್ರಾಮ ವಾಸ್ತವ್ಯದ ಕುರಿತು ಸೂಕ್ತ ಛಾಯಾಚಿತ್ರದೊಂದಿಗೆ ಜಿಪಂ ಕಚೇರಿಗೆ ವರದಿ ಕಳುಹಿಸಬೇಕಾಗಿದೆ. ಒಟ್ಟಾರೆ ಜಿಪಂ ಸಿಇಒ ಅವರು ತಾಲೂಕು ಮಟ್ಟದ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಮಾಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಎಷ್ಟರ ಮಟ್ಟಿಗೆ ಫಲಪ್ರದವಾಗುತ್ತದೆ ಎಂಬುದನ್ನು ಕಾಯ್ದು ನೋಡಬೇಕು.
ಸ್ವಚ್ಛ ಭಾರತ ಮಿಷನ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಯೋಜನೆಗಳಲ್ಲಿ ಜನರ ಪಾಲುದಾರಿಕೆ ಹೆಚ್ಚಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ತಿಂಗಳಿಗೊಮ್ಮೆ ಗ್ರಾಮವಾಸ್ತವ್ಯ ಮಾಡಲು ಸೂಚಿಸಲಾಗಿದೆ. ಇದರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ. –
ರಮೇಶ ದೇಸಾಯಿ, ಸಿಇಒ, ಹಾವೇರಿ.
-ಎಚ್.ಕೆ. ನಟರಾಜ