ಬೆಂಗಳೂರು: ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯ ಮಂತ್ರಿ ಬಸ ವ ರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್‌ನಿಂದ ಜಿಲ್ಲಾ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಮಹಾರಾಷ್ಟ್ರ ದ ಕೋಯ್ನಾ ಜಲಾಶಯಗಳಿಂದ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿ ಗಳೊಂದಿಗೆ ಸಂಪರ್ಕದಲ್ಲಿರುವಂತೆ ಸೂಚಿಸಿದ್ದಾರೆ.
ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು. ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸರಿಯಾಗಿ ಸಮೀಕ್ಷೆ ಮಾಡುವಂತೆ ತಿಳಿಸಿದರು.
ಅಲ್ಲದೇ, ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಹಾಗೂ ಮಳೆ ಮುನ್ಸೂಚನೆಯನ್ನು ಗಮನಿಸಿ, ಮುನ್ನೆಚ್ಚರಿಕಾ ಕ್ರಮಗಳ ಜತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು. ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳವುದು. ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪಾರದರ್ಶಕವಾಗಿ ಪರಿಹಾರ ಒದಗಿಸುವಂತೆ ಹೇಳಿದರು.
ಭೂಕುಸಿತದ ಸಾಧ್ಯತೆಗಳುಳ್ಳ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸುವುದು ಹಾಗೂ ದುರ್ಬಲ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸುವುದು ಹಾಗೂ ಕೂಡಲೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ನಿಯಂತ್ರಣ ಕೊಠಡಿಗಳ ಮೂಲಕ ಭಾರೀ ಮಳೆ ಹಾಗೂ ಪ್ರವಾಹ ಸ್ಥಿತಿಯ ಕುರಿತ ಅಹವಾಲುಗಳಿಗೆ ಸ್ಪಂದಿಸಬೇಕೆಂದು ತಾಕೀತು ಮಾಡಿದರು.