ನವದೆಹಲಿ:ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಹಾಗೂ ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ಧ್ವಂಸ ನಡೆಸುತ್ತಿರುವ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಬುಧವಾರ (ಅಕ್ಟೋಬರ್ 20) ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಇದನ್ನೂ ಓದಿ:ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು
ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಬಾಂಗ್ಲಾದೇಶದ ರಾಯಭಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.
ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ವಿರುದ್ಧದ ಹಿಂಸಾಚಾರ ಘಟನೆ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದೆ. ಸಾವಿರಾರು ಮಂದಿ ಹಿಂದೂಗಳ ಮೇಲೆ ದಾಳಿ ನಡೆಸಿದ್ದಾರೆ. ಈವರೆಗೆ ಹತ್ತಕ್ಕೂ ಹೆಚ್ಚು ಮಂದಿ ಹಿಂದೂಗಳ ಹತ್ಯೆಗೈಯಲಾಗಿದೆ. ಯಾವುದೇ ಕಾರಣಕ್ಕೂ ಹಿಂದೂಗಳ ಮೇಲಿನ ಅಮಾನವೀಯ ಕೃತ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಎಚ್ ಪಿಯ ಜೈನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶದ ರಾಯಭಾರಿ ಕಚೇರಿ ಮುಂಭಾಗದಲ್ಲಿ ಇಂದು ಬೆಳಗ್ಗೆ 11ಗಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆ ದೇಶದ ಪ್ರತಿಯೊಂದು ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.