ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಭೇಟಿ ಸಂದರ್ಭದಲ್ಲಿ ಹೈ ಕಮಾಂಡ್ ಜೊತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆಯುತ್ತಾರೆ ಎಂದು ಕಾದು ಕುಳಿತಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಶನಿವಾರ ಸಂಜೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್‌ನಿಂದ ಒಪ್ಪಿಗೆ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ನೀತಿ ಆಯೋಗದ ಸಭೆ ದಿನಪೂರ್ತಿ ನಡೆದಿದ್ದರಿಂದ ಪಕ್ಷದ ವರಿಷ್ಠರನ್ನ ಭೇಟಿ ಮಾಡಲು ಸಮಯ ಸಿಗದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಭಾನುವಾರ ರಾತ್ರಿ ವಾಪಸ್ ಆಗಿದ್ದಾರೆ.
ಮುಖ್ಯಮಂತ್ರಿಗಳ ಆಪ್ತ ಮೂಲಗಳ ಪ್ರಕಾರ ಭಾನುವಾರ ಮುಖ್ಯಮಂತ್ರಿ ಹೈ ಕಮಾಂಡ್ ನಾಯಕರ ಭೇಟಿಗೆ ಯಾವುದೇ ಸಮಯ ಕೋರಿರಲಿಲ್ಲ ಎಂದು ಹೇಳಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತಂತೆಯೂ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಬೇಕೆಂಬ ಒತ್ತಡ ಕೇಳಿ ಬರುತ್ತಿರುವುದರಿಂದ ಈ ಕುರಿತಂತೆಯೂ ಹೈ ಕಮಾಂಡ್ ಮೇಲೆ ಒತ್ತಡ ಹೇರಿ ಶೀಘ್ರವೇ ಪಕ್ಷದ ರಾಜ್ಯಾಧ್ಯಕ್ಷ ನೇಮಕದ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿತ್ತು. ಸಿದ್ದರಾಮಯ್ಯ ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡದೇ ವಾಪಸ್ ಬಂದಿರುವುದರಿಂದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯೂ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.
ಒಂದು ಮೂಲದ ಪ್ರಕಾರ ಮುಖ್ಯಮಂತ್ರಿ ರಾಜ್ಯದಲ್ಲಿ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 13 ಕ್ಕೆ ನಾಲ್ಕು ವರ್ಷ ಪೂರೈಸಲಿದ್ದು, ಅಲ್ಲಿಯವರೆಗೂ ಸಂಪುಟ ವಿಸ್ತರಣೆ ಮಾಡದೇ ಮುಂದೂಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಾಲ್ಕು ವರ್ಷ ಪೂರೈಸಿದ ಸಂದರ್ಭದಲ್ಲಿ ಹೈ ಕಮಾಂಡ್ ನಾಯಕರಿಗೆ ಅಭಿನಂದನೆ ಸಲ್ಲಿಸಲು ದೆಹಲಿಗೆ ತೆರಳಿ, ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕುರಿತು ಪ್ರಸ್ತಾಪಿಸಿ, ವಿಸ್ತರಣೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಷಯವನ್ನು ಈಗಾಗಲೇ ಮುಖ್ಯಮಂತ್ರಿ ಹೈ ಕಮಾಂಡ್ ಗಮನಕ್ಕೆ ತಂದಿದ್ದು, ತಮ್ಮ ಪರವಾಗಿ ವಿಧಾನ ಪರಿಷತ್ ಸದಸ್ಯ ಎಸ್. ಆರ್. ಪಾಟೀಲ್ ಅವರ ಹೆಸರನ್ನು ಹೈ ಕಮಾಂಡ್ ಮುಂದೆ ಇಟ್ಟಿದ್ದಾರೆ. ಪರಮೇಶ್ವರ ಅವರನ್ನು ಬದಲಾಯಿಸುವುದು ಅಥವಾ ಮುಂದುವರೆಸುವ ಕುರಿತಂತೆ ಹೈ ಕಮಾಂಡ್ ಆದಷ್ಟು ಬೇಗ ತೀರ್ಮಾನ ತೆಗೆಕೊಳ್ಳಬೇಕೆಂದು ಈಗಾಗಲೇ ಮನವಿ ಮಾಡಿರುವುದರಿಂದ ಶೀಘ್ರವೆ ಹೈ ಕಮಾಂಡ್ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.