Advertisement

ಸಂಪುಟ ವಿಸ್ತರಣೆ ಮತ್ತೆ ಮುಂದೂಡುವ ಸಾಧ್ಯತೆ

06:30 AM Oct 01, 2018 | |

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಿದ್ದು, ಸಚಿವಾಕಾಂಕ್ಷಿಗಳಿಗೆ ಮತ್ತೂಮ್ಮೆ ನಿರಾಸೆಯಾಗುವ ಸಾಧ್ಯತೆಯಿದೆ. 

Advertisement

ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆದರೆ, ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಪ್ರಕ್ರಿಯೆ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

ರಾಜ್ಯ ಕಾಂಗ್ರೆಸ್‌ ನಾಯಕರು ಹಾಗೂ ಹೈಕಮಾಂಡ್‌ ಅಕ್ಟೋಬರ್‌ 10ರ ನಂತರ ಸಂಪುಟ ವಿಸ್ತರಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಲಾಬಿಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ ನಲ್ಲಿ ಸಚಿವಾಕಾಂಕ್ಷಿಗಳು ಹೆಚ್ಚಿರುವುದರಿಂದ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಹಾಗೂ ಸಂಪುಟ ವಿಸ್ತರಣೆ ಎರಡೂ ಏಕಕಾಲಕ್ಕೆ ಮಾಡುವ ಮೂಲಕ ಪಕ್ಷದಲ್ಲಿ ಉಂಟಾಗುವ ಬಂಡಾಯ ತಡೆಗಟ್ಟಲು ಹೈಕಮಾಂಡ್‌ ಕಾರ್ಯ ತಂತ್ರ ರೂಪಿಸಿದೆ.

ಆದರೆ, ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಅಕ್ಟೋಬರ್‌ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗ
ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ. ಒಂದು ವೇಳೆ ಅಕ್ಟೋಬರ್‌ ಮೊದಲ ವಾರದಲ್ಲಿ ಅಧಿಸೂಚನೆ ಹೊರಡಿಸಿದರೆ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆಗೆ ಕೈ ಹಾಕಿದರೆ ಚುನಾವಣೆ ಸಂದರ್ಭದಲ್ಲಿ ಸಚಿವ ಸ್ಥಾನ ವಂಚಿತರು ಎರಡೂ ಕ್ಷೇತ್ರಗಳಲ್ಲಿ ಪರೋಕ್ಷವಾಗಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡುವ ಸಾಧ್ಯತೆಯಿದೆ ಎನ್ನುವ ಕಾರಣಕ್ಕೆ ಮತ್ತೆ ಮುಂದೂಡಬಹುದೆಂದು ಹೇಳಲಾಗುತ್ತಿದೆ.

ಹೊಂದಾಣಿಕೆ ಲೆಕ್ಕಾಚಾರ: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಸಂಖ್ಯಾ ಬಲದ ದೃಷ್ಠಿಯಿಂದ ಈ ಉಪ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎರಡೂ ಪಕ್ಷಗಳು ಒಂದೊಂದು ಕ್ಷೇತ್ರಗಳನ್ನು ಹಂಚಿಕೊಂಡು ಸ್ಪರ್ಧಿಸುವ ಬಗ್ಗೆ ಪ್ರಾಥಮಿಕ ಹಂತದ ಮಾತುಕತೆ ನಡೆದಿವೆ.

Advertisement

ಆದರೆ, ಮೈತ್ರಿ ಮಾಡಿಕೊಂಡು ಜಂಟಿಯಾಗಿ ಚುನಾವಣೆ ಎದುರಿಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಅಪಸ್ವರ ಕೇಳಿ ಬರುತ್ತಿದೆ. ರಾಮನಗರದಲ್ಲಿ ಜೆಡಿಎಸ್‌ ಜಯಗಳಿಸಿದ್ದರೂ, ಕಾಂಗ್ರೆಸ್‌ಗೆ ತನ್ನದೇ ಆದ ಮತ ಬ್ಯಾಂಕ್‌ ಇದ್ದು, ಜೆಡಿಎಸ್‌ಗೆ ಕ್ಷೇತ್ರ
ಬಿಟ್ಟುಕೊಡುವುದರಿಂದ ಪಕ್ಷದ ಸಾಂಪ್ರದಾಯಿಕ ಮತಗಳು ಕೈ ತಪ್ಪುತ್ತವೆ.

2018ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ 69,990 ಮತಗಳನ್ನು ಪಡೆದಿದ್ದು, ಜೆಡಿಎಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕುಮಾರಸ್ವಾಮಿಗೆ ತೀವ್ರ ಪೈಪೋಟಿ ನೀಡಿದ್ದರು. ಆದರೆ, ಜಮಖಂಡಿಯಲ್ಲಿ ಜೆಡಿಎಸ್‌ ಪರಿಸ್ಥಿತಿ ಆ ರೀತಿ ಇಲ್ಲ. ಆ ಕ್ಷೇತ್ರದಲ್ಲಿ ಜೆಡಿಎಸ್‌ ಅಸ್ತಿತ್ವವೇ ಇಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಸದಾಶಿವ ಕಲಾಲ್‌ ಕೇವಲ 849 ಮತಗಳನ್ನು ಪಡೆದಿದ್ದಾರೆ. ಆ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧಿಸಿದರೂ ಕಾಂಗ್ರೆಸ್‌ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎನ್ನುವುದು ಪಕ್ಷದ ಕೆಲವು ನಾಯಕರ ವಾದ. ಸ್ವತಃ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕೂಡ ರಾಮನಗರ ಕ್ಷೇತ್ರ ಬಿಟ್ಟು ಕೊಡುವ ಬಗ್ಗೆ ಆಕ್ಷೇಪ ಹೊಂದಿದ್ದಾರೆಂದು ಹೇಳಲಾಗುತ್ತಿದೆ.

ಜಮಖಂಡಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಆಯ್ಕೆ ಕುರಿತಂತೆ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದ್ದು, ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದ್ದು, ಈಗಾಗಲೇ ಪರೋಕ್ಷ ವಾಗಿ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ರಾಮನಗರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವಂತೆ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ನಾಯಕರು ಯಾವುದೇ ರೀತಿಯ ಸಭೆಗಳನ್ನು ಮಾಡದಿರುವುದು, ಪರೋಕ್ಷವಾಗಿ ಮೈತ್ರಿಗೆ ಕಾಂಗ್ರೆಸ್‌ ಒಲವು ಹೊಂದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಚುನಾವಣೆ ಯಾವಾಗ ಘೋಷಣೆಯಾದರೂ ಎದುರಿಸಲು ಸಿದಟಛಿರಿದ್ದೇವೆ. ಜಮಖಂಡಿಯಲ್ಲಿ ಜೆಡಿಎಸ್‌ಶಕ್ತಿ ಕಡಿಮೆಯಿದೆ. ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಪಕ್ಷದ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ.
– ಆನಂದ ನ್ಯಾಮಗೌಡ, ಜಮಖಂಡಿ ಕಾಂಗ್ರೆಸ್‌ ಅಭ್ಯರ್ಥಿ

– ಶಂಕರ ಪಾಗೋಜಿ

Advertisement

Udayavani is now on Telegram. Click here to join our channel and stay updated with the latest news.

Next