ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಗುರುವಾರ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.
‘ಸಿಎಂ ಸಿದ್ದರಾಮಯ್ಯ ಅವರನ್ನು ಸಂಜೆ 7.30 ಕ್ಕೆ ಭೇಟಿಯಾಗಿ ನಾನು ರಾಜೀನಾಮೆ ಪತ್ರ ನೀಡುತ್ತೇನೆ. ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ, ಯಾರ ಒತ್ತಡದಿಂದಲೂ ನಾನು ರಾಜೀನಾಮೆಗೆ ಮುಂದಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದರು.
‘ಸಿಎಂ ಸಿದ್ದರಾಮಯ್ಯ ಅವರು ಅದ್ಭುತವಾದ ಆಡಳಿತ ನೀಡುತ್ತಿದ್ದಾರೆ. ಗ್ಯಾರಂಟಿಗಳನ್ನು ಈಡೇರಿಸಿ ಸುಭಿಕ್ಷವಾಗಿ ಇಟ್ಟಿದ್ದಾರೆ.ಸಿಎಂ, ಡಿಸಿಎಂ ಡಿ.ಕೆ.ಶಿವಕುಮಾರ್, ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷಕ್ಕೆ ಮುಜುಗರವಾಗಬಾರದು ಎಂದು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿ ಬರುತ್ತಿದ್ದೇನೆ. ನನ್ನ ಮೇಲೆ ಆರೋಪ ನಿರಾಧಾರ, ನಾನು ತನಿಖೆ ಮುಗಿದ ಬಳಿಕ ಎಲ್ಲ ಆರೋಪಗಳಿಂದ ಮುಕ್ತನಾಗುತ್ತೇನೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ ಬಿ.ನಾಗೇಂದ್ರಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಸ್‌ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರ ಜತೆಗೆ 50 ಕೋಟಿ ರೂ.ಗೂ ಹೆಚ್ಚಿನ ಹಣ ದುರುಪಯೋಗವಾಗಿರುವ ಕಾರಣದಿಂದಾಗಿ ಸಿಬಿಐ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆಯನ್ನೂ ಆರಂಭಿಸಿದೆ.