ಹುಣಸೂರು: ಭಾರತದಲ್ಲಿ 18 ತುಂಬಿದ ಎಲ್ಲರಿಗೂ ಮತದಾನ ಮಾಡುವ ಹಕ್ಕನ್ನು ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದು, ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಬೇಕು ಎಂದು ತಾಲೂಕು ಆರೋಗ್ಯ ಸಹಾಯಕ ಚಂದ್ರಶೇಖರ್ ಹೇಳಿದರು.
ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಜಾಥಾ ಕಾರ್ಯಾಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಬೇಕು. ಆ ಮೂಲಕ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಚುನಾವಣಾ ಆಯೋಗ ಹೆಚ್ಚು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಹೇಳಿದರು.
ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ್ ಮಾತನಾಡಿ, ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕು. ಅದನ್ನು ತಪ್ಪದೆ ಚಲಾಯಿಸಬೇಕು. ಇಂದಿನ ದಿನಗಳಲ್ಲಿ ವಿದ್ಯಾವಂತರೇ ಮತದಾನ ಮಾಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.
ಪ್ರತಿಯೊಬ್ಬ ಭಾರತೀಯ ಪೌರನೂ ಸ್ವಯಂಪ್ರೇರಣೆಯಿಂದ ಮತದಾನ ಮಾಡಬೇಕು. ನೆರೆಹೊರೆಯವರಿಗೂ ಮತದಾನದ ಜಾಗೃತಿ ಮೂಡಿಸಬೇಕು. ಆ ಮೂಲಕ ಶೇ.100 ಪ್ರಮಾಣದ ಮತದಾನ ಪ್ರಕ್ರಿಯೆ ನಡೆಸಲು ಕೈಜೋಡಿಸಬೇಕು ಎಂದು ಹೇಳಿದರು. ಜಾಥಾದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು.