ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದ ಗಡಿ ಗ್ರಾಮಗಳಲ್ಲಿ ತಮಿಳು ನಾಡು ಮತ್ತು ಕನಕಪುರ ತಾಲೂಕಿನ ಮತದಾರರ ಪಟ್ಟಿಯಲ್ಲಿ ಎರಡೂ ಕಡೆ ಹೆಸರು ನೋಂದಾಯಿಸಿಕೊಂಡಿರುವ ಮತದಾರರು ಇರುವ ಸಂಗತಿ ಇದೀಗ ಬಹಿರಂಗ ಗೊಂಡಿದೆ.
ಹೌದು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾ ವಣೆಗೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಈ ಸಂಗತಿಯನ್ನು ಬಹಿರಂಗ ಪಡಿಸಿದ್ದು, ಕನಕಪುರ ಗಡಿ ಭಾಗದಲ್ಲಿ ತಮಿಳುನಾಡು ಮತ್ತು ಕನಕಪುರ ತಾಲೂಕಿನಲ್ಲಿ ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಂಡಿರುವುದು ತಿಳಿದು ಬಂದಿದ್ದು ವಿವಿಧ ರಾಜಕೀಯ ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳು ಪರಿಶೀಲಿಸಿ ಪಟ್ಟಿ ಮಾಡಿ ಕ್ರಮವಹಿಸುವಂತೆ ತಿಳಿಸಿದ್ದಾರೆ.
ಮೂರು ತಾಲೂಕಿನಲ್ಲಿ ಒಂದೂ ಹೆಸರು ಸೇರ್ಪಡೆಯಾಗಿಲ್ಲ: ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಆರಂಭಗೊಂಡಿದೆ. ಇದುವರೆಗೆ ಜಿಲ್ಲೆಯ ಕನಕಪುರ, ಹಾರೋಹಳ್ಳಿ ಮತ್ತು ಚನ್ನಪಟ್ಟಣ ತಾಲೂಕಿನಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆಗೊಳಿಸಿಲ್ಲ ಇಂದು ಮತ್ತು ನಾಳೆ ಮತದಾರರ ಪಟ್ಟಿ ಸಂಕ್ಷೀಪ್ತ ಪರಿಷ್ಕರಣೆ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸಲು ಹೆಚ್ಚು ಪರಿಣಾಮ ಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕೇಂದ್ರ ಚುನಾವಣಾ ಆಯೋಗ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ಪ್ರಾರಂಭವಾಗಿದೆ.
ಜಿಲ್ಲೆಯ ಮಾಗಡಿ ತಾಲೂಕಿನ 301 ಮತಗಟ್ಟೆಗಳು, ರಾಮನಗರ ತಾಲೂ ಕಿನ 277 ಮತಗಟ್ಟೆಗಳು,ಕನಕಪುರ ತಾಲೂಕಿನ 297 ಮತಗಟ್ಟೆಗಳು ಹಾಗೂ ಚನ್ನಪಟ್ಟಣ ತಾಲೂಕಿನ 271 ಮತ ಗಟ್ಟೆಗಳು ಇದ್ದು, ಪ್ರತೀ ಮತಗಟ್ಟೆಗಳಿಗೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾ ವಣಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ಪ್ರತೀ ದಿನ ಜಿಲ್ಲಾ ಚುನಾವಣಾಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿದರು.
ಮತದಾರರಿಗೆ ಜಾಗೃತಿ ಮೂಡಿಸಿ: ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಆಗುವ ರೀತಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಪ್ರತಿ ಮತಗಟ್ಟೆಗಳಿಗೆ ಭೇಟಿ ನೀಡಿ ಯುವಕ, ಯುವತಿಯರು, ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವವರು, ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರು ವವರನ್ನು ಗುರುತಿಸಿ, ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತದಾರರಿಗೆ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು. ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಬದಲಾವಣೆಗಳಿದ್ದಲ್ಲಿ ಮಾಡಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದು ಪಡಿ, ಬದಲಾವಣೆ ಮಾಡಬಯ ಸುವವರು ವೋಟರ್ ಹೆಲ್ಪ್ಲೈನ್ ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಲು ಅಧಿಕಾರಿಗಳು ಅವಕಾಶ ಮಾಡಿಕೊಡುವಂತೆ ಸೂಚಿಸಿದರು.
ಸಂಬಂಧಿಸಿದ ಮತಗಟ್ಟೆ ಅಧಿಕಾರಿ ಅಥವಾ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದು.ಆಯೋಗದ ಸಹಾಯವಾಣಿ1950 ಸಂಖ್ಯೆಗೆ ಉಚಿತವಾಗಿ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಚೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.