ಬೆಂಗಳೂರು: ಬಹುಕೋಟಿ ವಕ್ಫ್ ಆಸ್ತಿ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಬೇಕು ಮತ್ತು ಈ ಕುರಿತಂತೆ ಅನ್ವರ್ ಮಾಣಿಪ್ಪಾಡಿ ನೀಡಿದ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿ ಸೆ. 6ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ. 6ರಂದು ಬೆಳಗ್ಗೆ 11 ಗಂಟೆಗೆ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಾಗುವುದು. ಇದರಲ್ಲಿ ಬಿಜೆಪಿಯ ಎಲ್ಲಾ ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಕ್ಫ್ ಆಸ್ತಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸದಿದ್ದರೆ ಅಲ್ಪಸಂಖ್ಯಾತರ ಖಾತೆ ಸಚಿವ ಜಮೀರ್ ಅಹಮದ್ ಅವರ ರಾಜಿನಾಮೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಹುಕೋಟಿ ಮೊತ್ತದ ಅವ್ಯವಹಾರ ನಡೆದಿದೆ. ಇದರಲ್ಲಿ ಕಾಂಗ್ರೆಸ್‌ನ ನಾಯಕರು ಶಾಮೀಲಾಗಿದ್ದಾರೆ ಎಂದು ಅನ್ವರ್ ಮಾಣಿಪ್ಪಾಡಿ ಅವರು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದಾಗ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ಸದನದಲ್ಲಿ ಮಂಡಿಸಲು ಹಿಂದೇಟು ಹಾಕಿತ್ತು. ಆದರೆ, ಬಿಜೆಪಿ ವರದಿ ಮಂಡನೆಗೆ ಆಗ್ರಹಿಸಿ ಮೇಲ್ಮನೆಯಲ್ಲಿ ಹೋರಾಟ ನಡೆಸಿದಾಗ ಸಭಾಪತಿಗಳು ವರದಿ ಮಂಡಿಸಲು ಆದೇಶಿದ್ದರು. ಆದರೆ, ಇದುವರೆಗೂ ಸರ್ಕಾರ ವರದಿಯನ್ನು ಸದನದಲ್ಲಿ ಮಂಡಿಸಿಲ್ಲ ಎಂದು ಆರೋಪಿಸಿದರು.
ಅಲ್ಲದೆ, ಜುಲೈನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ವೇಳೆ ಮೇಲ್ಮನೆ ಸದಸ್ಯ ಅರುಣ್ ಶಹಾಪುರ ಪ್ರಶ್ನೆಗೆ ಉತ್ತರಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್, ವಕ್ಫ್ ಆಸ್ತಿ ಹಗರಣವನ್ನು ಸಿಬಿಐಗೆ ವಹಿಸುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರದಲ್ಲಿ ಸದನದಲ್ಲಿ ನೀಡಿದ ಭರವಸೆಯಿಂದ ಹಿಂದೆ ಸರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೆ. 6ರಂದು ಧರಣಿ ನಡೆಸುವ ಮೂಲಕ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.