ಬೆಂಗಳೂರು: ಮಹಾನಗರ ಪಾಲಿಕೆಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ಹಾಗೂ ವಾರ್ಡ್‌ಗಳನ್ನು ಮರುವಿಂಗಡಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಈ ವೇಳೆ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವಾರ್ಡ್‌ಗಳನ್ನು ಮರುವಿಗಂಡಣೆ ಮಾಡಿರುವ ಬಗ್ಗೆ ದಾಖಲೆಗಳನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ, ಅರ್ಜಿಗಳು ಇತ್ಯರ್ಥಗೊಳ್ಳುವವರೆಗೆ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮೌಖೀಕ ಸೂಚನೆ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರತಿ ಜನಗಣತಿ ಬಳಿಕ ವಾರ್ಡ್‌ಗಳ ಮರುವಿಂಗಡಣೆ ಹಾಗೂ ಮೀಸಲಾತಿ ಆವರ್ತನೆ ಆಗಬೇಕು. ಅದರಂತೆ, 2011ರ ಜನಗಣತಿ ಆಧರಿಸಿ ವಾರ್ಡ್ ಮರುವಿಂಗಡಣೆ ಮತ್ತು ಮೀಸಲಾತಿ ಆವರ್ತನೆ ಮಾಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, 2021ರಲ್ಲಿ ಮತ್ತೇ ಜನಗಣತಿ ನಡೆಯುತ್ತದೆ. ಅದರ ನಂತರ ಪುನಃ ಮೀಸಲಾತಿ ಆವರ್ತನೆ ಮಾಡಬೇಕಾಗುತ್ತದೆ. ಈ ರೀತಿ ಪ್ರತಿ ಹತ್ತು ವರ್ಷಗಳಿಗೊಮ್ಮೆ ಮೀಸಲಾತಿ ಆವರ್ತನೆ ಹಾಗೂ ಪುನಾರಾವರ್ತನೆ ನಡೆದರೆ, ಸಮಸ್ಯೆಗಳಿಗೆ ಕೊನೆ ಇಲ್ಲದಂತಾಗುತ್ತದೆ ಎಂದರು.
ಸರ್ಕಾರದ ಪರ ವಕೀಲರು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ಮೀಸಲಾತಿ, ಆವರ್ತನೆ ಮತ್ತು ವಾರ್ಡ್ ಮುರುವಿಂಗಡಣೆಯ ಗೊಂದಲದಲ್ಲಿ ಚುನಾವಣೆ ವಿಳಂಬವಾಗಬಾರದು ಅನ್ನುವುದಷ್ಟೇ ಆಯೋಗದ ಕಾಳಜಿ ಎಂದು ಚುನಾವಣಾ ಆಯೋಗದ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.