ಬೆಂಗಳೂರು/ಹುಬ್ಬಳ್ಳಿ: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ಬಿಜೆಪಿ ಮಂಗಳವಾರ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿ, ಅವರ ವಿರುದ್ಧ ಕ್ರಮಕ್ಕೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿದೆ.
ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಐವನ್ ಅವರು ರಾಜ್ಯಪಾಲರ ಮೇಲೆ ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ಬೆದರಿಕೆ, ಪ್ರಚೋದನೆ ನೀಡುವ ಮೂಲಕ ದೇಶದ್ರೋಹ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಐವನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮಂಗಳೂರು, ಮಂಡ್ಯ, ಶಿವಮೊಗ್ಗ, ಬೀದರ್‌ನಲ್ಲೂ ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.
ಐವನ್‌ಗೆ ಪಾಕ್ ಉಗ್ರರ ನಂಟು: ಸಂಸದ ಕಾರಜೋಳ ಶಂಕೆ
ಬೆಂಗಳೂರು: ಐವನ್ ಡಿ’ಸೋಜಾ ಅವರು ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ. ರಾಜಭವನಕ್ಕೆ ನುಗ್ಗಿ ತೊಂದರೆ ಮಾಡುತ್ತೇವೆ ಎಂದಿದ್ದಾರೆ. ಅವರಿಗೆ ಪಾಕ್ ಉಗ್ರರ ನಂಟಿದೆಯೇ? ಎಂಬ ಸಂಶಯ ಬರುತ್ತಿದೆ. ಅವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.