ಮುಂಬೈ: ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಬೌಲರ್ ದೀಪಕ್ ಚಾಹರ್ ಅವರು ಸರಣಿಯಿಂದಲೇ ಹೊರಬಿದ್ದಿದ್ದಾರೆ. ದೀಪಕ್ ಚಾಹರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ.
ಇದೀಗ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಉಳಿದ ಪಂದ್ಯಗಳಿಗೆ ದೀಪಕ್ ಚಾಹರ್ ಬದಲಿಗೆ ಮತ್ತೋರ್ವ ಆಲ್ ರೌಂಡರ್ ರನ್ನು ಆಯ್ಕೆ ಮಾಡಲಾಗಿದೆ. ಬಲಗೈ ಆಫ್ ಸ್ಪಿನ್ನರ್ ಆಗಿರುವ ವಾಷಿಂಗ್ಟನ್ ಸುಂದರ್ ಉಳಿದ ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ.
ಇಂದೋರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದ ಬಳಿಕ ದೀಪಕ್ ಚಾಹರ್ ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಲಕ್ನೋದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆಡುವ ಬಳಗದಲ್ಲಿ ಅವರು ಕಾಣಿಸಿಕೊಂಡಿರಲಿಲ್ಲ.
ಇದನ್ನೂ ಓದಿ:ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಫಿಲ್ಮ್ ಫೇರ್ ಅವಾರ್ಡ್ಸ್: ಇಲ್ಲಿದೆ ಕನ್ನಡ ನಾಮಿನೇಶನ್ಸ್
ಸದ್ಯ ದೀಪಕ್ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ಹಿಂತಿರುಗಲಿದ್ದು, ಅಲ್ಲಿನ ವೈದ್ಯಕೀಯ ತಂಡದಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಭಾರತವು ಅ. 9ರಂದು ರಾಂಚಿಯಲ್ಲಿ ಎರಡನೇ ಏಕದಿನ ಪಂದ್ಯವನ್ನು ಆಡಲಿದೆ. ಮೂರನೇ ಪಂದ್ಯ ಅ.11 ರಂದು ನವದೆಹಲಿಯಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿತ್ತು.
ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪ ನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.