Advertisement

ಬೆಳ್ಳಳ್ಳಿ ಬದಲು ಮಿಟಗಾನಹಳ್ಳಿಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ

07:49 AM Jul 27, 2019 | Team Udayavani |

ಬೆಂಗಳೂರು: ನಗರದ ತ್ಯಾಜ್ಯ ಸಮಸ್ಯಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

Advertisement

ಸಭೆ ಉದ್ದೇಶಿಸಿ ಮಾತನಾಡಿದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ‘ಮಿಶ್ರ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬೆಳ್ಳಳ್ಳಿ ಕ್ವಾರಿ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವೆಂತೆ’ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ತ್ಯಾಜ್ಯ ವಿಲೇವಾರಿಯಲ್ಲಿ ಲೋಪವಾದರೆ, ಸಾರ್ವಜನಿಕರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ ಮತ್ತು ಇದು ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹೀಗಾಗಿ, ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ನಗರದಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಶೀಘ್ರ ವಿಲೇವಾರಿ ಮಾಡಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸಫ‌ರ್ರಾಜ್‌ ಖಾನ್‌ ಪ್ರತಿಕ್ರಿಯಿಸಿ, ಬೆಳ್ಳಳ್ಳಿ ಕ್ವಾರಿ ಭರ್ತಿಯಾಗಿವುದರಿಂದ ತ್ಯಾಜ್ಯ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪಕ್ಕದಲ್ಲೇ ಮಿಟಗಾನಹಳ್ಳಿ ಕ್ವಾರಿ ಇದ್ದು, ಅದರಲ್ಲಿ ಮಿಶ್ರ ತ್ಯಾಜ್ಯ ವಿಲೇವಾರಿ ಮಾಡಬಹುದಾಗಿದೆ. ಈ ಸಂಬಂಧ ಈಗಾಗಲೇ ಅಲ್ಪಾವಧಿ ಟೆಂಡರ್‌ ಕರೆಯಲಾಗಿದೆ. ವಾರಾದೊಳಗೆ ಕ್ವಾರಿಗೆ ಕಸ ವಿಲೇವಾರಿ ಮಾಡಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

‘ವಾಣಿಜ್ಯ (ಬಲ್ಕ್ ಜನರೇಟರ್ಸ್‌) ಸಂಸ್ಥೆಗಳಿಂದ ಬೃಹತ್‌ ಪ್ರಮಾಣದಲ್ಲಿ ಉತ್ಪತ್ತಿ ಆಗುವ ತ್ಯಾಜ್ಯ ಸಂಗ್ರಹಕ್ಕೆ ಪ್ರತ್ಯೇಕ ಟೆಂಡರ್‌ ಕರೆಯಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಒಣ ಕಸವಿಲೆವಾರಿ ಮಾಡಲು ಈಗಾಗಲೇ ಚಿಂದಿ ಆಯುವವರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 8 ಸಾವಿರ ಮಂದಿ ಚಿಂದಿ ಆಯುವವರಿದ್ದಾರೆ. ಅವರು ಒಣ ತ್ಯಾಜ್ಯ ಸಂಗ್ರಹಿಸಿ ಸಂಸ್ಕರಣಾ ಘಟಕಗಳಿಗೆ ಕೊಡುತ್ತಿದ್ದಾರೆ’ ಎಂದು ವಿವರಿಸಿದರು.

Advertisement

‘ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಲು ಕಣ್ಣೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ಆದರೆ, ಸಾರ್ವಜನಿಕರು ಖಾಲಿ ನಿವೇಶಗಳಲ್ಲಿ, ಕೆರೆ ಮತ್ತು ರಾಜಕಾಲುವೆಯ ಅಂಚಿನಲ್ಲಿ ರಾತ್ರಿ ವೇಳೆ ಕಟ್ಟಡ ತ್ಯಾಜ್ಯ ತಂದು ಸುರಿಯುತ್ತಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮೇಯರ್‌ ಮಾತನಾಡಿ, ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಸುರಿಯುತ್ತಿರುವುದರಿಂದ ನಾನಾ ಸಮಸ್ಯೆಗಳು ಉಂಟಾಗುತ್ತಿದೆ. ಕೆರೆಗಳೂ ಅವನತಿ ಅಂಚಿಗೆ ಸಾಗುತ್ತಿವೆ. ಇದನ್ನು ತಪ್ಪಿಸಲು ಕೂಡಲೆ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಕಡೆಗಳಲ್ಲಿ ಸ್ಥಳ ಗುರುತಿಸಿ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಉಪಮೇಯರ್‌ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್‌, ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರಾಣಿ ತ್ಯಾಜ್ಯ ವಿಲೇವಾರಿಗೆ ವಲಯವಾರು ಟೆಂಡರ್‌: ‘ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಾಂಸದ ಮಳಿಗೆಗಳಿದ್ದು, ಪ್ರತಿ ನಿತ್ಯ 40 ಮೆಟ್ರಿಕ್‌ ಟನ್‌ ಪ್ರಾಣಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ 80ರಿಂದ 90 ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಈ ತ್ಯಾಜ್ಯ ವಿಲೇವಾರಿಗೆ ಪಾಲಿಕೆಯ ಎಂಟು ವಲಯಗಳಲ್ಲಿ ಪ್ರತ್ಯೇಕ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ. ಗುತ್ತಿಗೆ ಪಡೆದವರು ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ಹೊಂದಿರದಿದ್ದರೆ ಘಕಟ ಹೊಂದಿರುವವರ ಜತೆ ಒಡಂಬಡಿಕೆ ಮಾಡಿಕೊಂಡು ಕೆಲಸ ಮಾಡಬೇಕು. ಕಂಟೇನರ್‌ ಮಾದರಿಯ ಆಟೋಗಳ ಮೂಲಕ ತ್ಯಾಜ್ಯ ಸಂಗ್ರಹಿಸಿ, ಅದನ್ನು ಸಂಸ್ಕರಣಾ ಘಟಕಗಳಿಗೆ ನೀಡಬೇಕು’ ಎಂದು ಸಫ‌ರ್ರಾಜ್‌ ಖಾನ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next